ಉನ್ನತ ಮಟ್ಟದ ತನಿಖೆಗೆ ತಂಡ: ಜಗದೀಶ್ ಶೆಟ್ಟರ್

ಗುರುವಾರ , ಜೂಲೈ 18, 2019
28 °C

ಉನ್ನತ ಮಟ್ಟದ ತನಿಖೆಗೆ ತಂಡ: ಜಗದೀಶ್ ಶೆಟ್ಟರ್

Published:
Updated:

ಬೀದರ್: ಬೀದರ್ ಜಿಲ್ಲೆಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಮಟ್ಟದ ತನಿಖಾ ತಂಡ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.ಯೋಜನೆ ಅಡಿ ಜಿಲ್ಲೆಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಶೇ.90 ರಷ್ಟು ಹಣ ದುರುಪಯೋಗ ಆಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಸಭೆಯಲ್ಲಿ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ಆಗಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಲಿದೆ. ಈ ಕುರಿತು ಎರಡು ತಿಂಗಳ ಒಳಗಾಗಿ ತನಿಖೆ ಪೂರ್ಣಗೊಳಿಸಲಾಗುವುದು. ತನಿಖೆ ಪೂರ್ಣಗೊಳಿಸುವ ತನಕ ಪಾವತಿ ಸ್ಥಗಿತಗೊಳಿಸುವಂತೆ ಸೂಚಿಸಿದರು.ದೂರುಗಳು ಬಂದಿರುವ ಎಲ್ಲ ಕಾಮಗಾರಿಗಳ ತನಿಖೆ ಕೈಗೊಳ್ಳಲಾಗುವುದು. ಅವ್ಯವಹಾರ ಕಂಡು ಬಂದಲ್ಲಿ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ನಿಲ್ಲಿಸಬಾರದು. ಪ್ರತಿ ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಕಾಮಗಾರಿ ವಿವರಗಳನ್ನು ಒಳಗೊಂಡ ಫಲಕ ಹಾಕಬೇಕು. ಈ ಕುರಿತು ಗ್ರಾಮ ಪಂಚಾಯಿತಿಗಳಿಗೆ ಸೂಚನೆ ನೀಡುವಂತೆ ತಿಳಿಸಿದರು.ಖಾತರಿ ಯೋಜನೆ ಅಡಿ 2010-11ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 98 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದರಲ್ಲಿ 66 ಕೋಟಿ ರೂಪಾಯಿ ಪಾವತಿಸಲಾಗಿದೆ. ಅವ್ಯವಹಾರದ ದೂರುಗಳು ಬಂದ ಕಡೆಗಳಲ್ಲಿ ಪರಿಶೀಲಿಸಲು ಜಿಲ್ಲಾಮಟ್ಟದ ಅಧಿಕಾರಿಗಳ ತಂಡ ರಚಿಸಲಾಗಿದೆ. ಅವ್ಯವಹಾರಗಳಿಗೆ ಸಂಬಂಧಿಸಿದಂತೆ 23 ಪ್ರಕರಣಗಳನ್ನು ದಾಖಲಿಸಲಾಗಿದ್ದು, 6 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿತೇಂದ್ರ ನಾಯಕ್ ತಿಳಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ರೇವುನಾಯಕ್ ಬೆಳಮಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕುಶಾಲ ಪಾಟೀಲ್ ಗಾದಗಿ, ಉಪಾಧ್ಯಕ್ಷ ತಾನಾಜಿ ರಾಠೋಡ್, ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry