ಗುರುವಾರ , ಏಪ್ರಿಲ್ 22, 2021
22 °C

ಉಪಚುನಾವಣೆ: ಎಚ್‌ಡಿಕೆ ಕಾರಣ-ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ:  ‘ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ವರ್ತನೆಯಿಂದಾಗಿ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಎದುರಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳಿದರು.ಚನ್ನಪಟ್ಟಣದ ಉಪ ಚುನಾವಣೆ ಸಂಬಂಧ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರೊಡನೆ ನಾಮಪತ್ರ ಸಲ್ಲಿಸಲು ಚುನಾವಣಾ ಅಧಿಕಾರಿ ಕಚೇರಿಗೆ ಹೋಗುವ ಮೊದಲು ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಶಾಸಕರನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳದ ಕಾರಣ ಶಾಸಕರು ಪಕ್ಷ ತ್ಯಜಿಸಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಎದುರಾಗಿದೆ ಎಂದ ಅವರು, ಉಪ ಚುನಾವಣೆಗೆ ಬಿಜೆಪಿ ಕಾರಣ ಎಂದು ಹೇಳುವುದು ಸರಿಯಲ್ಲ ಎಂದರು.ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿಯಾಗಿದ್ದು, ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇನ್ನೂ ಅಭ್ಯರ್ಥಿಗಳ ಹೆಸರನ್ನೇ ಪ್ರಕಟಿಸಿಲ್ಲ. ಈ ಎರಡೂ ಪಕ್ಷಗಳಲ್ಲಿ ಅಭ್ಯರ್ಥಿಗಳೇ ಇಲ್ಲವಾಗಿದ್ದಾರೆ ಎಂದು ಅವರು ಕಟಕಿಯಾಡಿದರು.‘ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರೇ ಸ್ಪರ್ಧೆಗಿಳಿಯುವ ಆಶಯ ವ್ಯಕ್ತಪಡಿಸಿದ್ದಾರೆ. ಪಕ್ಷದ ಸ್ಥಳೀಯ ಕಾರ್ಯಕರ್ತರಿಗೆ ಅವಕಾಶ ನೀಡದೇ ಸ್ವತಃ ತಾನೇ ಅಭ್ಯರ್ಥಿಯಾಗುತ್ತೇನೆ ಎಂದು ಕುಮಾರಸ್ವಾಮಿ ಹೇಳುವುದರಿಂದಲೇ ಗೊತ್ತಾಗುತ್ತದೆ ಜೆಡಿಎಸ್‌ನಲ್ಲಿ ಎಷ್ಟರ ಮಟ್ಟಿಗೆ ಕುಟುಂಬ ರಾಜಕಾರಣ ಇದೆ’ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.ರಾಜ್ಯದ ಬಿಜೆಪಿ ಸರ್ಕಾರದ ಸಾಧನೆಗಳೇ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ನೆರವಿಗೆ ಬರಲಿವೆ. ಪಕ್ಷದ ಚುನಾವಣಾ ಪ್ರಣಾಳಿಕೆಗಳಲ್ಲಿ ಉಲ್ಲೇಖಿಸದಿದ್ದರೂ ಈ ಬಾರಿಯ ಬಜೆಟ್‌ನಲ್ಲಿ ರೈತರಿಗೆ ಶೇ 1ರಷ್ಟು ಬಡ್ಡಿದರದ ಸಾಲ ಯೋಜನೆ ಪ್ರಕಟಿಸಲಾಗಿದೆ. ಕೆಎಂಎಫ್ ಶಕ್ತಿ ಹೆಚ್ಚಿಸಲಾಗಿದೆ. ಅದರ ಜತೆಗೆ ಹಾಲು ಉತ್ಪಾದಕರಿಗೆ ಹೆಚ್ಚಿನ ನೆರವು ಕಲ್ಪಿಸಲಾಗಿದೆ. ಇವೆಲ್ಲ ಚುನಾವಣೆಯಲ್ಲಿ ಬಿಜೆಪಿಗೆ ವರವಾಗಲಿವೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.