ಭಾನುವಾರ, ಮೇ 9, 2021
26 °C

ಉಪಲೋಕಾಯುಕ್ತರ ಭವಿಷ್ಯ ಇಂದು ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎರಡನೆಯ ಉಪಲೋಕಾಯುಕ್ತರಾಗಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರ `ಭವಿಷ್ಯ~ ಮಂಗಳವಾರ ಹೈಕೋರ್ಟ್‌ನಲ್ಲಿ ನಿರ್ಧಾರವಾಗಲಿದೆ.ಇವರನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿರುವ ಆದೇಶವು ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನ್ಯಾಯಮೂರ್ತಿಗಳಾದ ಎನ್.ಕುಮಾರ್ ಹಾಗೂ ಎಚ್.ಎಸ್.ಕೆಂಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಮಂಗಳವಾರ ತೀರ್ಪು ನೀಡಲಿದೆ.ಇವರ ನೇಮಕ ರದ್ದು ಮಾಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸುತ್ತಿದೆ. ಈ ಅರ್ಜಿಯ ವಾದ, ಪ್ರತಿವಾದ ಸೋಮವಾರ ಮುಕ್ತಾಯಗೊಂಡಿದೆ. ತೀರ್ಪಿನ ಉಕ್ತಲೇಖನವನ್ನು (ಡಿಕ್ಟೇಷನ್) ನೀಡಲು ನ್ಯಾಯಮೂರ್ತಿಗಳು ಆರಂಭಿಸಿದ್ದಾರೆ. ಸುಮಾರು ಮೂರು ಗಂಟೆಗಳ ಕಾಲ ಉಕ್ತಲೇಖನ ನೀಡಿದ ನ್ಯಾಯಮೂರ್ತಿಗಳು ಕೋರ್ಟ್ ಅವಧಿ ಮುಗಿದ ಹಿನ್ನೆಲೆಯಲ್ಲಿ ಅದನ್ನು ಮುಂದೂಡಿದರು.ತಮ್ಮ ಸಲಹೆ ಪಡೆಯದೇ ಉಪಲೋಕಾಯುಕ್ತರನ್ನು ನೇಮಕ ಮಾಡಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಇವರ ನೇಮಕ ರದ್ದು ಮಾಡಬೇಕು ಎನ್ನುವುದು ಅರ್ಜಿದಾರರ ದೂರು. ಆದರೆ ಈ ಹುದ್ದೆಗೆ ಯಾರನ್ನು ನೇಮಕ ಮಾಡಬೇಕು ಎಂಬ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳ ಸಲಹೆ ಪಡೆಯಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ ಎಂದು ನ್ಯಾ.ಚಂದ್ರಶೇಖರಯ್ಯ ಪ್ರತಿಪಾದಿಸಿದ್ದಾರೆ.ನೇಮಕದ ಮುನ್ನ ಮುಖ್ಯ ನ್ಯಾಯಮೂರ್ತಿಗಳ ಸಲಹೆ ಪಡೆಯುವುದು ಅಗತ್ಯ ಎಂದು ಕಾನೂನಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ `ಸಲಹೆ~ ಎಂಬ ಶಬ್ದದ ಬಗ್ಗೆ ಕಾಯ್ದೆಯಲ್ಲಿ ಸ್ಪಷ್ಟತೆ ಇಲ್ಲ. ಈ ಶಬ್ದದ ಕುರಿತಾಗಿ ನ್ಯಾಯಮೂರ್ತಿಗಳು ತೀರ್ಪಿನಲ್ಲಿ ಸ್ಪಷ್ಟನೆ ನೀಡುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.