ಶನಿವಾರ, ಮೇ 15, 2021
23 °C
ಗುಟ್ಕಾ ಮಾರಾಟ, ಬಳಕೆ ನಿಷೇಧ

ಎಚ್ಚರಿಕೆ ವಹಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಸುಪ್ರೀಂಕೋರ್ಟ್ ಆದೇಶದಂತೆ ಗುಟ್ಕಾ ಮಾರಾಟ ಮಾಡುವುದು ಹಾಗೂ ಗುಟ್ಕಾ ತಿನ್ನುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಗುಟ್ಕಾ ತಿನ್ನುವವರು ಕಂಡುಬಂದಲ್ಲಿ ದಂಡ ಹಾಕುವಂತೆ ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ್ ಸೂಚಿಸಿದ್ದಾರೆ.ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿಯೂ ಸಂಪೂರ್ಣವಾಗಿ ನಿಷೇಧಿಸುವ ದಿಸೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಸಾರ್ವಜನಿಕ ಪ್ರದೇಶಗಳು ಸೇರಿದಂತೆ ಯಾವುದೇ ಪ್ರದೇಶಗಳಲ್ಲಿ ಗುಟ್ಕಾವನ್ನು ಮಾರಾಟ ಮಾಡಬಾರದು ಮತ್ತು ಬಳಕೆ ಮಾಡಬಾರದು. ಇಂತಹ ಚಟುವಟಿಕೆಗಳು ಕಂಡುಬಂದರೆ ಮಾರಾಟಗಾರರು ಮತ್ತು ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.ಜಿಲ್ಲೆಯಲ್ಲಿ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ವೈದ್ಯಾಧಿಕಾರಿಗಳು ಮತ್ತು ಹಿರಿಯ ಆರೋಗ್ಯ ನಿರೀಕ್ಷಕರು, ಹಾಗೆಯೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯಾಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ ಎಲ್ಲ ಅಂಗಡಿಗಳಿಗೆ ತೆರಳಿ ತಪಾಸಣೆ ಮಾಡಿ ಗುಟ್ಕಾ ನಿಷೇಧಕ್ಕೆ ಕ್ರಮವಹಿಸುವಂತೆ ಅವರು ನಿರ್ದೇಶನ ನೀಡಿದರು.ಬಸ್ ನಿಲ್ದಾಣ ಮತ್ತು ಜನದಟ್ಟಣೆ ಪ್ರದೇಶಗಳಲ್ಲಿ ಗುಟ್ಕಾ ಮಾರಾಟ ಮತ್ತು ಬಳಕೆ ಹೆಚ್ಚು ಕಂಡುಬರುತ್ತದೆ. ಇಂತಹ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ಶಾಲೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಎಸ್. ಶಿವಕುಮಾರ್ ಮಾತನಾಡಿ, ಗುಟ್ಕಾ ವ್ಯಸನಿಗಳು ಕಂಡುಬಂದರೆ ಅಂತಹವರಿಗೆ ಆಪ್ತ ಸಮಾಲೋಚನೆ ಮೂಲಕ ಮನವರಿಕೆ ಮಾಡಿ ಬಿಡಿಸಬಹುದಾಗಿದೆ ಎಂದು ಅವರು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಅನುಚೇತ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸತೀಶ್, ಜಿಲ್ಲಾ ಆರೋಗ್ಯ ಸಹ ಶಿಕ್ಷಣಾಧಿಕಾರಿ ಪುಟ್ಟಪ್ಪ, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಬಿ.ಬಿ. ನಾಗರಾಜು ಮತ್ತಿತರರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.