ಎಲ್ಲರೂ ಒಂದಲ್ಲ ಒಂದು ರೀತಿ ಮನೋರೋಗಿಗಳು...

7

ಎಲ್ಲರೂ ಒಂದಲ್ಲ ಒಂದು ರೀತಿ ಮನೋರೋಗಿಗಳು...

Published:
Updated:

ರಾಮನಗರ: ಮನೋರೋಗಿಗಳನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳುವ ಸಮಾಜ ನಿರ್ಮಾಣವಾಗಬೇಕಿದೆ. ಮಾನಸಿಕ ಅಸ್ವಸ್ಥತೆಗೆ ಒಳಗಾದವರಿಗೆ ಚಿಕಿತ್ಸೆ ಪಡೆಯುವಂತೆ ಪೋತ್ಸಾಹಿಸಿ, ಅಗತ್ಯವಾದ ಧೈರ್ಯ ತುಂಬಬೇಕಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್. ರುದ್ರಮುನಿ ಅಭಿಪ್ರಾಯಪಟ್ಟರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿಯಾಗಿ ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಮನೋರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಮನೋರೋಗಿಗಳೇ ಆಗಿದ್ದಾರೆ. ತಮಗಿರುವ ಸಮಸ್ಯೆಯನ್ನು ಹೇಳಿಕೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ತಪ್ಪಲ್ಲ ಎಂದು ತಿಳಿಸಿದರು.ಮಾನಸಿಕ ಸೌಂದರ್ಯ ಮುಖ್ಯ: ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯೆ ಡಾ. ರಜನಿ ಮಾತನಾಡಿ, ಯಾಂತ್ರಿಕೃತ ಜೀವನದಲ್ಲಿ ಮನುಷ್ಯ ಅನಗತ್ಯ ಒತ್ತಡಗಳಿಗೆ ಒಳಗಾಗಿ ಮಾನಸಿಕ ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾರೆ.ಮಾನಸಿಕ ಅಸ್ವಸ್ಥತೆಗೆ ಒಳಗಾದವರು ಸಕಾಲಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ಆದರೆ 50 ಮಂದಿಗೆ ಮನೋರೋಗವಿದ್ದರೆ ಶೇ 10ರಷ್ಟು ಜನರೂ ಚಿಕಿತ್ಸೆಯನ್ನು ಪಡೆಯುತ್ತಿಲ್ಲ. ದೈಹಿಕ ಸೌಂದರ್ಯಕ್ಕಿಂತ ಮಾನಸಿಕ ಸೌಂದರ್ಯವನ್ನು ಕಾಪಾಡಿಕೊಳ್ಳಬೇಕಾದ ಅವಶ್ಯಕತೆಯಿದೆ ಎಂದು ಅವರು ಹೇಳಿದರು.ಇಂದಿನ ದಿನಗಳಲ್ಲಿ ವಿವಾಹ ವಿಚ್ಛೇಧನ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಮೂರು ಸಾವಿರಕ್ಕೂ ಹೆಚ್ಚು ಹಾಗೂ ರಾಮನಗರ ತಾಲ್ಲೂಕಿನಲ್ಲಿ ಕಳೆದ ಆರು ತಿಂಗಳಿನಿಂದ ಈಚೆಗೆ 150ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಅವರು ಅಂಕಿ ಅಂಶ ನೀಡಿದರು.ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಜೆ. ವಿಜಯನರಸಿಂಹ ಮಾತನಾಡಿ, ಜನರು ಜೀವನದಲ್ಲಿ ಉತ್ಸಾಹವನ್ನೇ ಕಳೆದುಕೊಂಡು ನಿರುತ್ಸಾಹಿಗಳಾಗಿ ಕಾಲ ಕಳೆಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳಬೇಕಾದ ಅಗತ್ಯ ಇದೆ. ಸೂಕ್ತ ಮತ್ತು ಸಮರ್ಪಕ ಚಿಕಿತ್ಸೆಯಿಂದ ಇದು ಸಾಧ್ಯ ಎಂದರು.ವಕೀಲ ಎಸ್. ಹನುಮಂತು ಅವರು ಮಾನಸಿಕ ಆರೋಗ್ಯ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು. ನ್ಯಾಯಾಧೀಶರಾದ ವಿ.ಪುಷ್ಪಾವತಿ,  ಕೆ. ಸುರೇಶ್, ಕೆ. ನಾರಾಯಣಪ್ರಸಾದ್, ಕೆ.ಎನ್. ರೂಪಾ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಬ್ರಾಹಿಂ ಖಲೀಲ್, ವಕೀಲರ ಸಂಘದ ಅಧ್ಯಕ್ಷ ಕೆ.ಎಂ.ಜಯರಾಮಯ್ಯ, ಕಾರ್ಯದರ್ಶಿ ಬಿ.ಎಂ.ಶ್ರೀವತ್ಸ, ಖಜಾಂಚಿ ಅಶೋಕ್, ಕಾನೂನು ಸೇವೆಗಳ ಪ್ರಾಧಿಕಾರದ ಕೃಷ್ಣಸ್ವಾಮಿ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry