ಭಾನುವಾರ, ಮೇ 16, 2021
28 °C

ಎಲ್ಲ ತಾಲ್ಲೂಕುಗಳಲ್ಲಿ ಅಗ್ನಿಶಾಮಕ ಠಾಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲೂ ಅಗ್ನಿಶಾಮಕ ಠಾಣೆಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ~ ಎಂದು ಗೃಹ ಸಚಿವ ಆರ್.ಅಶೋಕ ಹೇಳಿದರು.ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ನಗರದ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ಶನಿವಾರ ಆಯೋಜಿಸಿದ್ದ ಕವಾಯತು ವೀಕ್ಷಿಸಿ ಅವರು ಮಾತನಾಡಿದರು.ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಅಗ್ನಿಶಾಮಕ ಠಾಣೆ ಆರಂಭಿಸುವ ಉದ್ದೇಶಕ್ಕಾಗಿ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿದೆ. ಅಗ್ನಿ ಅನಾಹುತ ಸಂದರ್ಭಗಳಲ್ಲಿ ಜನರನ್ನು ಹಾಗೂ ಸಾರ್ವಜನಿಕ ಆಸ್ತಿಯನ್ನು ರಕ್ಷಣೆ ಮಾಡುವ ವೇಳೆ ಹುತಾತ್ಮರಾಗಿರುವ ಅಗ್ನಿಶಾಮಕ ಸಿಬ್ಬಂದಿಯನ್ನು ನೆನೆಯುವುದು ನಮ್ಮ ಕರ್ತವ್ಯ. ರಾಜ್ಯದ ಅಗ್ನಿಶಾಮಕ ಸಿಬ್ಬಂದಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಅವರು ಹೇಳಿದರು.ಕಳೆದ ವರ್ಷ ದೇಶದ ವಿವಿಧೆಡೆ ಸಂಭವಿಸಿದ ಅಗ್ನಿ ಅನಾಹುತಗಳ ರಕ್ಷಣಾ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಅಗ್ನಿಶಾಮಕ ಸಿಬ್ಬಂದಿಯ ಸ್ಮರಣಾರ್ಥ ಮೌನಾಚರಣೆ ಮಾಡಿ ಗೌರವ ಸಲ್ಲಿಸಲಾಯಿತು. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎ.ಆರ್.ಇನ್ಫಂಟ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ನಿರ್ದೇಶಕ ಬಿ.ಜಿ.ಚೆಂಗಪ್ಪ, ಐಜಿಪಿ ಎನ್.ಶಿವಕುಮಾರ್ ಇತರರು ಪಾಲ್ಗೊಂಡಿದ್ದರು.ಶನಿವಾರದಿಂದ ಆರಂಭವಾಗಿರುವ ಅಗ್ನಿಶಾಮಕ ಸೇವಾ ಸಪ್ತಾಹ ಏ.20ರವರೆಗೆ ನಡೆಯಲಿದೆ. ಸಪ್ತಾಹದಲ್ಲಿ ಅಗ್ನಿ ಅನಾಹುತ ರಕ್ಷಣಾ ಕಾರ್ಯಾಚರಣೆ ಸಂಬಂಧ ಹಾಗೂ ಬೆಂಕಿ ನಂದಿಸುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ. ಅಲ್ಲದೇ ಅಡುಗೆ ಅನಿಲ ಬಳಕೆ, ಅಡುಗೆ ಅನಿಲ ಸೋರಿಕೆಯಾದರೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.