ಭಾನುವಾರ, ಮೇ 16, 2021
22 °C

ಎಸ್ಸೆಸ್ಸೆಲ್ಸಿ: ಮೌಲ್ಯಮಾಪನ ಬಹಿಷ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೇತನ ತಾರತಮ್ಯ ಸರಿಪಡಿಸುವುದಾಗಿ ನೀಡಿದ್ದ ಭರವಸೆಯನ್ನು ಸರ್ಕಾರ ಈಡೇರಿಸದ ಕಾರಣ ಇದೇ 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬಹಿಷ್ಕರಿಸುವುದಾಗಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಗೌಡರ ತಿಳಿಸಿದ್ದಾರೆ.ಪ್ರೌಢಶಾಲಾ ಸಹ ಶಿಕ್ಷಕರ ವೇತನ ತಾರತಮ್ಯ ಸಮಸ್ಯೆಯನ್ನು ಬಗೆಹರಿಸದೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ನೀಡಿದ್ದ ಆಶ್ವಾಸನೆಯನ್ನು ನಂಬಿ, ಇದುವರೆಗೆ ಶಾಂತ ರೀತಿಯಲ್ಲಿ ಚಳವಳಿ ನಡೆಸಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ರಾಜ್ಯವ್ಯಾಪಿ ಅನಿರ್ದಿಷ್ಟಕಾಲ ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಳೆದ ವರ್ಷ ವೇತನ ತಾರತಮ್ಯವನ್ನು ಹೋಗಲಾಡಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದಾಗ, ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳ ಸಮಿತಿಯನ್ನು ರಚಿಸಿದ್ದರು.ಸಮಿತಿಯು ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕರಿಗೆ ನೀಡುತ್ತಿರುವ ಹಾಗೆ 21,600-40,050 ವೇತನ ಶ್ರೇಣಿ ನೀಡುವಂತೆ ಶಿಫಾರಸು ಮಾಡಿತ್ತು. ಆದರೆ ಸರ್ಕಾರ ಅದನ್ನು ಜಾರಿ ಮಾಡಿಲ್ಲ. ಹೀಗಾಗಿ ಮೌಲ್ಯಮಾರ್ಪನ ಕಾರ್ಯವನ್ನು ಬಹಿಷ್ಕರಿಸುತ್ತಿದ್ದು, ಮುಂದೆ ಆಗುವ ತೊಂದರೆಗಳಿಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ.

500 ರೂಪಾಯಿ ವಿಶೇಷ ವೇತನಕ್ಕೆ ಆಗ್ರಹ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ 500 ರೂಪಾಯಿ ವಿಶೇಷ ವೇತನ ನೀಡದಿದ್ದರೆ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ, ಪ್ರಧಾನ ಕಾರ್ಯದರ್ಶಿ ವಿ.ಎಂ.ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.5ನೇ ವೇತನ ಆಯೋಗ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 200 ರೂಪಾಯಿ ವಿಶೇಷ ವೇತನ ನೀಡುವಂತೆ ಶಿಫಾರಸು ಮಾಡಿತ್ತು. ಇದನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು, ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೂ ಜಾರಿಗೊಳಿಸಲಾಗಿತ್ತು.6ನೇ ವೇತನ ಸಮಿತಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ, ಮುಖ್ಯೋಪಾಧ್ಯಾಯರಿಗೆ ಅನ್ಯಾಯವಾಗಿದೆ. ಸಮಿತಿಯು ಪದವಿ ಪೂರ್ವ ಉಪನ್ಯಾಸಕರಿಗೆ 500 ರೂಪಾಯಿ ವಿಶೇಷ ವೇತನ ನೀಡುವಂತೆ ಶಿಫಾರಸು ಮಾಡಿದೆ. ಇದನ್ನು ಪ್ರಾಥಮಿಕ ಶಾಲಾ ಶಿಕ್ಷಕರಿಗೂ ವಿಸ್ತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.