ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್

7

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್

Published:
Updated:

ಕೊಪ್ಪಳ: ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ಹಾಗೂ ಆ ಮೂಲಕ ಫಲಿತಾಂಶ ಸುಧಾರಣೆಗಾಗಿ ರಾಜ್ಯದ ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಪ್ರತ್ಯೇಕ ವಿದ್ಯಾರ್ಥಿ ನಿಲಯ ಆರಂಭಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ಧರಿಸಿದೆ.ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭಗೊಳ್ಳಲಿರುವ ಈ ವಿದ್ಯಾರ್ಥಿ ನಿಲಯಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. 50 ಜನ ಬಾಲಕರು ಹಾಗೂ 50 ಜನ ಬಾಲಕಿಯರಿಗೆ ಅವಕಾಶ ಕಲ್ಪಿಸಲಾಗುತ್ತಿದೆ.ಸದ್ಯ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ 8 ರಿಂದ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿದ್ದಾರೆ.ಈ ಪೈಕಿ 10ನೇ ತರಗತಿ ವಿದ್ಯಾರ್ಥಿಗಳನ್ನು ನೂತನ ವಿದ್ಯಾರ್ಥಿನಿಲಯಗಳಿಗೆ ಸ್ಥಳಾಂತರಿಸಿ, ವಿಶೇಷ ಬೋಧನೆಗೆ ವ್ಯವಸ್ಥೆ ಮಾಡಲಾಗುತ್ತದೆ. ಸ್ಥಳಾಂತರಗೊಂಡಿರುವ ವಿದ್ಯಾರ್ಥಿಗಳಲ್ಲದೇ ಹೊಸದಾಗಿ ವಿದ್ಯಾರ್ಥಿಗಳಿಗೆ ಸಹ ಪ್ರವೇಶ ನೀಡಲಾಗುತ್ತದೆ.ವಿಶೇಷ ಬೋಧನೆ: ಈ ವಿದ್ಯಾರ್ಥಿಗಳಿಗಾಗಿ ಉಪಗ್ರಹ ಆಧಾರಿತ ಬೋಧನೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ. ಅಲ್ಲದೇ, ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ಬೋಧನೆಗಾಗಿ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.ಒಟ್ಟಾರೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂಬುದೇ ಈ ನೂತನ ವ್ಯವಸ್ಥೆಯ ಉದ್ದೇಶ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಗಳು ತಿಳಿಸಿವೆ.ಪ್ರಾಯೋಗಿಕವಾಗಿ ಈ ವಿದ್ಯಾರ್ಥಿ ನಿಲಯಗಳನ್ನು ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರ ಆರಂಭಿಸಲಾಗುತ್ತಿದೆ. ಇವುಗಳ ಯಶಸ್ಸನ್ನು ಅವಲೋಕಿಸಿ ಎಲ್ಲ ಹೋಬಳಿ ಕೇಂದ್ರಗಳಲ್ಲಿ ಇಂತಹ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲಾಗುತ್ತದೆ.9ನೇ ತರಗತಿ ವರೆಗೆ ಗ್ರಾಮೀಣ ಭಾಗದಲ್ಲಿ ಓದಿರುವ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ವ್ಯಾಸಂಗಕ್ಕಾಗಿ ಈ ನೂತನ ವಿದ್ಯಾರ್ಥಿಗಳಿಗೆ ಸ್ಥಳಾಂತರಿಸುವುದರಿಂದ ಅಂತಹ ವಿದ್ಯಾರ್ಥಿಗಳು `ಗ್ರಾಮೀಣ ಅಭ್ಯರ್ಥಿ~ ಸೌಲಭ್ಯವನ್ನು ಕಳೆದುಕೊಳ್ಳುತ್ತಾರೆ.ಹೀಗಾಗಿ ಈ ವರ್ಷ ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರ ಇಂತಹ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲಾಗುವುದು. ಪಟ್ಟಣ ಪ್ರದೇಶಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ ಎಂದು ಈ ಮೂಲಗಳು ಸ್ಪಷ್ಟಪಡಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry