ಗುರುವಾರ , ಮೇ 13, 2021
38 °C
ಶಿಕ್ಷಣ ಶುದ್ಧೀಕರಣಕ್ಕೆ ಒತ್ತಾಯ

ಎಸ್‌ಎಫ್‌ಐ ಕಾರ್ಯಕರ್ತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಶಿಕ್ಷಣ ಕ್ಷೇತ್ರ ಶುದ್ಧೀಕರಣ ಹಾಗೂ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡೆರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ನಗರದ ಮೈಲಾರ ಮಹಾದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಎಸ್‌ಎಫ್‌ಐ ಕಾರ್ಯಕರ್ತರು, ಶಿಕ್ಷಣದ ವ್ಯಾಪಾರೀಕರಣ, ಖಾಸಗೀಕರಣದ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೇ, ಬಿಜೆಪಿ ಸರ್ಕಾರ ಶಿಕ್ಷಣವನ್ನು ಕೇಸರೀಕರಣ ಮಾಡಿದ್ದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪೂಜಾರ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ಹಾಳು ಮಾಡಿದೆಯಲ್ಲದೇ ಇಡೀ ವ್ಯವಸ್ಥೆಯನ್ನು ಅಧೋಗತಿಗೆ ತಳ್ಳಿದೆ. ನೂತನ ಕಾಂಗ್ರೆಸ್ ಸರ್ಕಾರದ ಮೇಲೆ ವಿದ್ಯಾರ್ಥಿಗಳು ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಆಗಿರುವ ಕೆಲ ತಪ್ಪುಗಳನ್ನು ಬದಲಾಯಿಸಿ ವಿದ್ಯಾರ್ಥಿ-ಶಿಕ್ಷಕರ ಏಳಿಗೆಗೆ ಅನುಕೂಲಕರವಾದ ನೀತಿಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿಯದೆ ಸಂವಿಧಾನ ಬದ್ಧ ಮಕ್ಕಳ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಕೆಲ ಖಾಸಗಿ ಶಾಲೆಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ದಲಿತ-ಹಿಂದುಳಿದ-ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ನಿರಾಕರಿಸುತ್ತಿವೆ. ಅಂತಹ ಶಾಲೆಗಳ ಮೇಲೆ ಸರ್ಕಾರ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು. ಎಲ್ಲ ಕಡೆಗಳಲ್ಲಿ ತಾಂಡವಾಡುತ್ತಿರುವ ಡೋನೇಷನ್ ಹಾವಳಿ ತಡೆಗಟ್ಟಲು ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರವನ್ನು ರಚಿಸುವುದರ ಜತೆಗೆ ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತರಬೇಕು ಎಂದು ಒತ್ತಾಯಿಸಿದರು.ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು. ಬದಲಾಗಿ ಅವುಗಳಿಗೆ ಅಗತ್ಯ ಶಿಕ್ಷಕರು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು. ಈ ಹಿಂದೆ ವೈದಿಕ ವ್ಯವಸ್ಥೆಯನ್ನು ವೈಭವೀಕರಿಸುವ ಅನೇಕ ವಿಚಾರಗಳನ್ನು ಪಠ್ಯಪುಸ್ತಕಗಳಲ್ಲಿ ಸೇರಿಸಿ ಶಿಕ್ಷಣದ ಕೇಸರೀಕರಣ ಮಾಡಲಾಗಿತ್ತು. ಅಂತಹ ಪಠ್ಯಗಳನ್ನು ಮರುಪರಿಷ್ಕರಣೆ ನಡೆಸಬೇಕು  ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸುಪ್ರಿಂಕೋರ್ಟ್ ನಿರ್ದೇಶನದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು  ಎಂದು ಒತ್ತಾಯಿಸಿದರು.ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ತಮ್ಮ ಬೇಡಿಕೆಗಳ ಮನವಿಯನ್ನು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ರೇಣುಕಾ ಕಹಾರ, ತಾಲ್ಲೂಕು ಅಧ್ಯಕ್ಷ ಬಸವರಾಜ ಬಾರ್ಕಿ, ಮುಖಂಡರಾದ ವಿನಾಯಕ. ವೈ, ನೀಲಮ್ಮ ಶಂಕ್ರಪ್ಪನವರ, ವಿನಾಯಕ ಬಿ.ಎಚ್. ಸಿಪಿಐ ಮುಖಂಡ ಜಾಬೀನ್ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.