ಸೋಮವಾರ, ಜೂನ್ 21, 2021
30 °C

ಐದು ಕ್ಷೇತ್ರದ ಮುಖಂಡರೊಂದಿಗೆ ಸಿ.ಎಂ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ಚುನಾವಣಾ ರಣತಂತ್ರ ರೂಪಿಸುವು­ದರಲ್ಲಿ ಮಗ್ನವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಐದು ಲೋಕಸಭಾ ಕ್ಷೇತ್ರಗಳ ಮುಖಂಡರ ಜೊತೆ ನಿರಂತರ ಸಭೆ ನಡೆಸಿದರು. ಕ್ಷೇತ್ರವಾರು ಸ್ಥಿತಿಗತಿ ಕುರಿತು ಮಾಹಿತಿ ಪಡೆದಿರುವ ಅವರು, ಅದನ್ನು ಆಧರಿಸಿ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದಾರೆ.ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ತುಮಕೂರು ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಸಭೆ ನಡೆಸಿದರು.ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳು, ಕ್ಷೇತ್ರದ ವ್ಯಾಪ್ತಿಯ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಕಳೆದ ಲೋಕಸಭಾ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಪರಾಜಿತರಾದ ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಸಭೆ ನಡೆಸಲಾಗಿದೆ. ಆಯಾ ಕ್ಷೇತ್ರಗಳಲ್ಲಿನ ಸದ್ಯದ ರಾಜಕೀಯ ಪರಿಸ್ಥಿತಿ, ಎದುರಾಳಿಗಳ ಬಲಾಬಲ, ಚುನಾವಣೆ ಮೇಲೆ ಪರಿಣಾಮ ಬೀರುವಂತಹ ಸ್ಥಳೀಯ ವಿಷಯಗಳು ಮತ್ತಿತರ ಮಾಹಿತಿಯನ್ನು ಸಿದ್ದರಾಮಯ್ಯ ಅವರು ಪಡೆದುಕೊಂಡಿದ್ದಾರೆ. ಪಕ್ಷದ ಮುಖಂಡರ ನಡುವೆ ಇರುವ ಭಿನ್ನಾಭಿಪ್ರಾಯಗಳ ಬಗ್ಗೆಯೂ ಸಭೆಯಲ್ಲೇ ವಿಚಾರಿಸಿದ್ದು, ಮನಸ್ತಾಪ ಸರಿಪಡಿಸುವ ಪ್ರಯತ್ನವನ್ನೂ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸುವುದು ನಮ್ಮ ಮುಂದಿರುವ ಹೊಣೆ. ಈ ಗುರಿಯನ್ನು ತಲುಪಲು ಎಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕು.ಸ್ಥಳೀಯವಾಗಿ ಇರುವಂತಹ ಭಿನ್ನಾಭಿಪ್ರಾಯಗಳು ಚುನಾವಣೆ ಮೇಲೆ ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ರೀತಿಯ ಸಮಸ್ಯೆಗಳಿದ್ದರೆ ತಕ್ಷಣ ಗಮನಕ್ಕೆ ತನ್ನಿ’ ಎಂದು ಮುಖ್ಯಮಂತ್ರಿಯವರು ಸಭೆಯಲ್ಲಿ ಪಾಲ್ಗೊಂಡಿದ್ದವರಿಗೆ ಸೂಚನೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.