ಮುಂಬೈ (ಪಿಟಿಐ): ತಮ್ಮ ಒಪ್ಪಂದವನ್ನು ರದ್ದು ಪಡಿಸಿದ್ದ ಸಂಬಂಧ ಐಪಿಎಲ್ ಫ್ರಾಂಚೈಸಿಗಳಾದ ರಾಜಸ್ತಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ತಂಡಗಳು ತಂದಿರುವ ತಡೆಯಾಜ್ಞೆ ವಿರುದ್ಧದ ಮುಂದಿನ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್‌ಗೆ ನೀಡಲಾಗಿದೆ.
ಶನಿವಾರ ಇಲ್ಲಿ ನಡೆದ ಬಿಸಿಸಿಐ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾಂಬೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಮನೋಹರ್ ಈಗ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಒಪ್ಪಂದದಲ್ಲಿ ದೋಷವಿದೆ ಎಂಬ ಕಾರಣ ರಾಜಸ್ತಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ತಂಡಗಳನ್ನು ಅಕ್ಟೋಬರ್ 10ರಂದು ಐಪಿಎಲ್‌ನಿಂದ ವಜಾಗೊಳಿಸಲಾಗಿತ್ತು. ಆದರೆ ಈ ತಂಡಗಳ ಮಾಲೀಕರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ.
ರಾಯಲ್ಸ್ ತಂಡಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಬಿಸಿಸಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಸ್.ಜೆ.ವಾಜಿಫ್ದಾರ್ ಡಿಸೆಂಬರ್ 14ರಂದು ತಳ್ಳಿ ಹಾಕಿದ್ದರು. ಅಷ್ಟು ಮಾತ್ರವಲ್ಲದೇ, ಐಪಿಎಲ್ ನಾಲ್ಕನೇ ಅವತರಣಿಕೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.