ಕನ್ನಡ ಮನಸ್ಸುಗಳು ಒಗ್ಗೂಡಲಿ: ಸ್ವಾಮೀಜಿ

7

ಕನ್ನಡ ಮನಸ್ಸುಗಳು ಒಗ್ಗೂಡಲಿ: ಸ್ವಾಮೀಜಿ

Published:
Updated:

ಯಾದಗಿರಿ: ಸಾಹಿತ್ಯ ಬೆಳವಣಿಗೆಗಾಗಿ ಕನ್ನಡ ಭವನಕ್ಕಿಂತಲೂ ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಕೆಲಸ ಆಗಬೇಕು. ಕನ್ನಡ ಸಾಹಿತ್ಯ ಪರಿಷತ್ ನೂತನ ಜಿಲ್ಲಾ ಘಟಕದ ಅಧ್ಯಕ್ಷರು ಈ ಕಾರ್ಯವನ್ನು ಮಾಡಿದಾಗ ಮಾತ್ರ ಕನ್ನಡದ ಕೆಲಸವನ್ನು ಯಶಸ್ವಿಯಾಗಿ ಮಾಡಲು ಸಾಧ್ಯ ಎಂದು ಗುರಮಠಕಲ್ ಖಾಸಾ ಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಸಲಹೆ ಮಾಡಿದರು.ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ಸಿದ್ಧಪ್ಪ ಹೊಟ್ಟಿ ಅದಮ್ಯ ಸಂಘಟನಾಶೀಲ ವ್ಯಕ್ತಿ. ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳನ್ನು ಕ್ರಿಯಾಶೀಲವಾಗಿ ನಡೆಸುವುದರ ಜೊತೆಗೆ ಗಡಿ ಭಾಗದಲ್ಲಿ ಕನ್ನಡ ಭಾಷೆ ಗಟ್ಟಿಯಾಗಿ ಬೆಳೆಯಲು ಶ್ರಮಿಸಬೇಕು ಎಂದು ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತಿಗೆ ಈಗ ಶತಮಾನದ ಸಂಭ್ರಮ. ಇಂತಹ ಸಂದರ್ಭದಲ್ಲಿ ನೂತನ ಜಿಲ್ಲಾ ಘಟಕದ ಪ್ರಥಮ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಿದ್ಧಪ್ಪ ಹೊಟ್ಟಿ ಅವರ ಮೇಲೆ ಸಾಕಷ್ಟು ಜವಾಬ್ದಾರಿಗಳಿವೆ. ಜಿಲ್ಲೆಯ ಸಾಹಿತ್ಯ, ಸಾಂಸ್ಕೃತಿಕ ವಲಯದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರನ್ನೂ ಒಂದುಗೂಡಿಸುವ ಮೂಲಕ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುವಂತಾಗಲಿ ಎಂದು ಹಾರೈಸಿದರು.ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ಉದ್ಘಾಟಿಸಿದರು. ಕಸಾಪ ಜಿಲ್ಲಾ ಘಟಕದ ಹಿಂದಿನ ಅಧ್ಯಕ್ಷ ವೀರಭದ್ರ ಸಿಂಪಿ ಅವರಿಂದ ನೂತನ ಅಧ್ಯಕ್ಷ ಸಿದ್ಧಪ್ಪ ಹೊಟ್ಟಿ ಅಧಿಕಾರ ಸ್ವೀಕರಿಸಿದರು.

 

ಪರಿಷತ್ ಗುಲ್ಬರ್ಗ ಜಿಲ್ಲಾ ಘಟಕದ ಅಧ್ಯಕ್ಷ ಮಹಿಪಾಲರಡ್ಡಿ ಮುನ್ನೂರ, ಯಾದಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವಂತ್ರಾಯಗೌಡ ಮಾಲಿಪಾಟೀಲ, ಶಹಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ಲಿಂಗಪ್ಪ ಆನೆಗುಂದಿ ಅತಿಥಿಗಳಾಗಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry