ಕಬ್ಬನ್ ಉದ್ಯಾನ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ: ಸಿ.ಎಂ

ಬೆಂಗಳೂರು: ಕಬ್ಬನ್ ಉದ್ಯಾನದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿಸಿದ್ದಾರೆ. ಈ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಅವರು ತೋಟಗಾರಿಕೆ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಬಂಧ ಮುಖ್ಯಮಂತ್ರಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಭೆ ನಡೆಯಿತು. ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಪ್ರಾಧಿಕಾರ ರಚನೆ ಆಗಲಿದೆ. ತೋಟಗಾರಿಕೆ ಮತ್ತು ಪ್ರವಾಸೋದ್ಯಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಖಾಸಗಿ ಸಂಸ್ಥೆಯ ಪ್ರತಿನಿಧಿಗಳು ಪ್ರಾಧಿಕಾರದ ಸದಸ್ಯರಾಗಿರುತ್ತಾರೆ.
‘ಅತ್ಯುತ್ತಮ ಪ್ರವಾಸಿ ತಾಣವನ್ನಾಗಿ ಕಬ್ಬನ್ ಉದ್ಯಾನವನ್ನು ಅಭಿವೃದ್ಧಿಪಡಿಸುವುದು ಪ್ರಾಧಿಕಾರ ರಚನೆಯ ಉದ್ದೇಶ. ಉದ್ಯಾನ ನಿರ್ವಹಣೆ ಮತ್ತು ಸಮಗ್ರ ಅಭಿವೃದ್ಧಿಗಾಗಿ ಖಾಸಗಿ ಸಂಸ್ಥೆಗಳ ನೆರವು ಪಡೆಯಲಾಗುವುದು. ಪ್ರವಾಸಿಗರನ್ನು ಸೆಳೆಯಲು, ಬಾಲಭವನ, ಮತ್ಸ್ಯಾಲಯ, ಚಿಣ್ಣರ ಉದ್ಯಾನ ಮತ್ತಿತರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಯೊಬ್ಬರು ವಿವರಿಸಿದರು.
‘ಪ್ರಾಧಿಕಾರ ರಚನೆ ಆದರೂ ಕಬ್ಬನ್ ಉದ್ಯಾನದ ಮಾಲೀಕತ್ವವನ್ನು ತೋಟಗಾರಿಕೆ ಇಲಾಖೆಯೇ ಹೊಂದಲಿದೆ. ಇಲ್ಲಿನ ಪಾರಂಪರಿಕ ಕಟ್ಟಡಗಳಿಗೆ ಹಾನಿ ಆಗದಂತೆ ಹಾಗೂ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಲಾಗುವುದು’ ಎಂದರು.
ಸಚಿವ ಶಾಮನೂರು ಶಿವಶಂಕರಪ್ಪ, ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಆರ್. ರೋಷನ್ ಬೇಗ್, ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಇತ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸ್ವೀಡನ್ ರಕ್ಷಣಾ ಸಚಿವ ಭೇಟಿ
ಸ್ವೀಡನ್ನ ರಕ್ಷಣಾ ಸಚಿವ ಪೀಟರ್ ಹುಲ್ಟ್ಕ್ವಿಸ್ಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಗುರುವಾರ ಭೇಟಿ ಮಾಡಿದರು.
ರಾಜ್ಯದಲ್ಲಿ ವರ್ಷಾಂತ್ಯದಲ್ಲಿ ಆಯೋಜಿಸಲಾಗುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲುದಾರಿಕಾ ರಾಷ್ಟ್ರವಾಗಿ ಭಾಗವಹಿಸುವಂತೆ ಮುಖ್ಯಮಂತ್ರಿಯವರು ಸ್ವೀಡನ್ಗೆ ವಿಶೇಷ ಆಹ್ವಾನ ನೀಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.