ಶನಿವಾರ, ಏಪ್ರಿಲ್ 17, 2021
32 °C

ಕರವೇ ಮುಖಂಡರಿಗೆ ಸಿಎಂ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಹೈದರಾಬಾದ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ನಿಟ್ಟಿನಲ್ಲಿ 371 ನೇ ಕಲಂಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಮಾರ್ಚ್ 15ರಂದು ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕರೆದೊಯ್ಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಮಂಗಳವಾರ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಉತ್ತರ ಕರ್ನಾಟಕ ಘಟಕದ ಅಧ್ಯಕ್ಷ ಶರಣು ಗದ್ದುಗೆ ನೇತೃತ್ವದಲ್ಲಿ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಈ ಭರವಸೆ ನೀಡಿದರು. ಹೈದರಾಬಾದ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ರೈಲ್ವೆ ಸೌಲಭ್ಯ ಸೇರಿದಂತೆ ಹೈದರಾಬಾದ ಕರ್ನಾಟಕ ಅಭಿವೃದ್ಧಿಯ ಹಲವಾರು ವಿಷಯಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.ಇದಕ್ಕೂ ಮೊದಲು ಮನವಿ ಸಲ್ಲಿಸಿದ ಶರಣು ಗದ್ದುಗೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಬಾರಿಯ ಬಜೆಟ್‌ನಲ್ಲಿ ಹೈದರಾಬಾದ ಕರ್ನಾಟಕಕ್ಕೆ ತೀವ್ರ ಅನ್ಯಾಯವಾಗಿದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು. ರೈಲ್ವೆ ಬಜೆಟ್‌ನಲ್ಲಿಯೂ ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ. ಹೊಸ ರೈಲು ಮಾರ್ಗಗಳಿಗೆ ಹಣ ಬಿಡುಗಡೆ ಮಾಡಬೇಕು. ಗುಲ್ಬರ್ಗದಿಂದ ಯಾದಗಿರಿ ಮೂಲಕ ಬೆಂಗಳೂರಿಗೆ ನೇರ ಇಂಟರ್‌ಸಿಟಿ ರೈಲು ಆರಂಭಿಸಬೇಕು. ಅಲ್ಲದೇ ಹೈದರಾಬಾದ ಕರ್ನಾಟಕದ ಅಭಿವೃದ್ಧಿಗಾಗಿ 371 ನೇ ಕಲಂಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕರೆದೊಯ್ಯಬೇಕು ಎಂದು ಒತ್ತಾಯಿಸಿದರು.ಕನ್ನಡಪರ ಸಂಘಟನೆಯ ಪದಾಧಿಕಾರಿಗಳಾದ ಅರುಣ ಪಾಟೀಲ, ಲಕ್ಷ್ಮಣ ದಸ್ತಿ, ಗುರುರಾಜ ಶಕ್ತಿ, ಅಮೃತ ಪಾಟೀಲ, ನಾಗಲಿಂಗಯ್ಯ ಮಠಪತಿ, ಶಿವಶರಣಪ್ಪ ಕಣದಾಳ, ನಂದಕುಮಾರ, ಭವಾನಿ ವಳಕೇರಿ, ಮನೀಷ್, ಶೇಖರ ಕೆಂಭಾವಿ, ಬಾಪುಗೌಡ ಗುಳ್ಯಾಳ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.