ಕಲೆ, ಸಾಹಿತ್ಯದಿಂದ ಬದುಕು ಸುಂದರ

7

ಕಲೆ, ಸಾಹಿತ್ಯದಿಂದ ಬದುಕು ಸುಂದರ

Published:
Updated:

ಗುಲ್ಬರ್ಗ: ಭಗವಂತ ನಮಗೆ ಅದ್ಭುತ ದೈವ ಶಕ್ತಿ ದಯಪಾಲಿಸಿದ್ದಾನೆ. ಹಾಗೆ ನೋಡಿದರೆ ನಾವೆಲ್ಲರೂ ಒಂದು ರೀತಿಯಿಂದ ಬದುಕಿನ ಪ್ರವಾಸಕ್ಕೆ ಬಂದವರು. ಸತ್ಯ, ಶ್ರದ್ಧೆಯಿಂದ ಬದುಕಿನ ಪಯಣ ಸಾಗಿಸಬೇಕು ಎಂದು ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಹೇಳಿದರು.ಚೈತನ್ಯಮಯಿ ಆರ್ಟ್ ಗ್ಯಾಲರಿ, ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ವಿಕಾಸ ಅಕಾಡೆಮಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಆಶ್ರಯದಲ್ಲಿ ನಗರದ ಕನ್ನಡ ಭವನದಲ್ಲಿ  ಚೈತನ್ಯಮಯಿ ಆರ್ಟ್ ಗ್ಯಾಲರಿ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಚಿತ್ರಕಲಾ ಪ್ರದರ್ಶನ ಹಾಗೂ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕಲೆ, ಸಾಹಿತ್ಯ, ಸಂಗೀತದಿಂದ ಬದುಕು ಸುಂದರವಾಗಿ ಅರಳಬಲ್ಲುದು. ಇದನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವುದರ ಜೊತೆಗೆ ಈ ಭಾಗದ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸುವ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.ಶಾಂತಾ ಪಸ್ತಾಪುರ ಅವರ `ಪಯಣ~ ಕೃತಿ ಲೋಕಾರ್ಪಣೆ ಮಾಡಿದ ಕರ್ನಾಟಕ ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ವಿ.ಜಿ. ಅಂದಾನಿ ಮಾತನಾಡಿ, ಸುತ್ತಾಟದ ಅನುಭಗಳನ್ನು ಚಿತ್ರ ಸಮೇತ ದಾಖಲಿಸಿರುವುದು ಗಮನಾರ್ಹವಾಗಿದೆ. ಓದುವ ಬರೆಯುವ ಹವ್ಯಾಸ ಮನುಷ್ಯನ ಆರೋಗ್ಯಕ್ಕೆ ಒಳ್ಳೆಯದು. ಜಗತ್ತು ಕೂಡ ಒಂದು ಚಿತ್ರಶಾಲೆ ಇದ್ದಂತೆ. ಆ ದಿಶೆಯಲ್ಲಿ ಪಾಟೀಲರ ಚಿತ್ರಯಾನ ಕೂಡ ಮೆಚ್ಚುವಂಥದ್ದು ಎಂದು ತಿಳಿಸಿದರು.ಮುಖ್ಯ ಅತಿಥಿಯಾಗಿದ್ದ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ ಮಾತನಾಡಿ, ಕಲೆ, ಸಾಹಿತ್ಯ, ಸಂಗೀತದ ಸಂಗಮವಾಗಿರುವ ಈ ಕಾರ್ಯಕ್ರಮ ತುಂಬಾ ಅಚ್ಚುಕಟ್ಟಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. `ಪಯಣ~ ಕುರಿತು ಪತ್ರಕರ್ತ ಶಿವರಂಜನ್ ಸತ್ಯಂಪೇಟೆ ಮಾತನಾಡಿದರು.ಕರ್ನಾಟಕ ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಜೆ.ಎಸ್. ಖಂಡೇರಾವ ಅಧ್ಯಕ್ಷತೆ ವಹಿಸಿದ್ದರು. ಡಾ. ಸುಜಾತಾ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಸ್ವಾಗತಿಸಿದರು. ಚೈತನ್ಯಮಯಿ ಆರ್ಟ್ ಗ್ಯಾಲರಿಯ ನಿರ್ದೇಶಕ ಎ.ಎಸ್. ಪಾಟೀಲ ಪ್ರಾಸ್ತಾವಿಕ ಮಾತನಡಿದರು. ಬಿ.ಎಚ್. ನಿರಗುಡಿ ವಂದಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry