ಸೋಮವಾರ, ಮೇ 16, 2022
30 °C

ಕಲ್ಲು ಎತ್ತಿಹಾಕಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವ್ಯಕ್ತಿಯೊಬ್ಬರ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಸುಬ್ರಹ್ಮಣ್ಯಪುರ ಸಮೀಪದ ಹರಿನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಸಂಜಯಗಾಂಧಿ ಕ್ಷಯ ರೋಗ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿದ್ದ ಅನಂತ (45) ಕೊಲೆಯಾದವರು.ಅವರು ಹರಿನಗರ ನಿವಾಸಿಯಾಗಿದ್ದರು. ದುಷ್ಕರ್ಮಿಗಳು ಅವರನ್ನು ಮನೆಯ ಸಮೀಪವೇ ಇರುವ ಖಾಲಿ ಜಾಗಕ್ಕೆ ಕರೆದೊಯ್ದು ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಶವವನ್ನು ನೋಡಿದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ.ಅನಂತ್ ಮದ್ಯವ್ಯಸನಿಯಾಗಿದ್ದರು. ಸಂಜೆ ಅವರು ಸ್ನೇಹಿತರ ಜತೆ ಇದ್ದ ಬಗ್ಗೆ ಮಾಹಿತಿ ಸಿಕ್ಕಿದೆ.ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್‌ಸ್ಪೆಕ್ಟರ್ ಬಾಳೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವೇಶ್ಯಾವಾಟಿಕೆ: ಬಂಧನ


ಕೆಲಸ ಕೊಡಿಸುವುದಾಗಿ ನಂಬಿಸಿ ಬಾಂಗ್ಲಾ ದೇಶದಿಂದ ಹುಡುಗಿಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಾಂಗ್ಲಾ ದೇಶದ ಅಲಿ ಅಕ್ಬರ್ (37) ಮತ್ತು ರೂಪಾ ಬೇಗಂ (26) ಎಂಬುವರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳು ಹುಳಿಮಾವಿನ ಮನೆಯೊಂದರಲ್ಲಿ ಹುಡುಗಿಯರನ್ನು ಅಕ್ರಮ ಬಂಧನದಲ್ಲಿಟ್ಟು ಈ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಆರೋಪಿಗಳನ್ನು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.ಆರೋಪಿಗಳು ಪ್ರತಿ ಗ್ರಾಹಕರಿಂದ ಐದರಿಂದ ಹತ್ತು ಸಾವಿರ ರೂಪಾಯಿ ಪಡೆಯುತ್ತಿದ್ದರು. ಹಲವು ವರ್ಷಗಳಿಂದ ಅವರು ಈ ದಂಧೆ ನಡೆಸುತ್ತಿದ್ದರು. ಆರೋಪಿಗಳಿಂದ ಐದು ಸಾವಿರ ನಗದು, ಮೂರು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕಳವು: ಬಂಧನ


ಮನೆ ಬೀಗ ಮುರಿದು ಕಳವು ಮಾಡುತ್ತಿದ್ದ ಆರೋಪದ ಮೇಲೆ ಗಾರ‌್ವೆಬಾವಿಪಾಳ್ಯದ ಇಮ್ರಾನ್ ಬೇಗ್ ಉರುಫ್ ಕರಡಿ ಇಮ್ರಾನ್ (29) ಮತ್ತು ಷಫಿ (40) ಎಂಬುವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.ಚಿತ್ರದುರ್ಗದ ಕುಮಾರ ಉರುಫ್ ಹಂದಿ ಕುಮಾರ ಎಂಬಾತನ ಜತೆ ಸೇರಿಕೊಂಡು ಆರೋಪಿಗಳು ಎಲೆಕ್ಟ್ರಾನಿಕ್‌ಸಿಟಿ, ಎಚ್‌ಎಸ್‌ಆರ್ ಲೇಔಟ್, ಪರಪ್ಪನಅಗ್ರಹಾರ, ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಗಳಲ್ಲಿ ಕಳವು ಮಾಡಿದ್ದರು. ಕುಮಾರ ಈಗ ಚಿತ್ರದುರ್ಗದ ಜೈಲಿನಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಇಮ್ರಾನ್ ವಿರುದ್ಧ ಚಿತ್ರದುರ್ಗ, ದಾವಣಗೆರೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 21 ಕಳವು, ದರೋಡೆ, ಡಕಾಯಿತಿ ಮತ್ತಿತರ ಪ್ರಕರಣಗಳು ದಾಖಲಾಗಿವೆ. ಷಫಿ  ಮೇಲೆ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಏಳು ಕಳವು ಪ್ರಕರಣಗಳಿವೆ ಎಂದು ಪೊಲೀಸರು ಹೇಳಿದ್ದಾರೆ. ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.