ಗುರುವಾರ , ಜೂನ್ 24, 2021
23 °C

ಕಳಪೆ ಪದಾರ್ಥಕ್ಕೆ ಮಾರಾಟಗಾರರೇ ಹೊಣೆ-ನಿಜಗಣ್ಣವರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಪರೀಕ್ಷಿಸಿಯೇ ಗ್ರಾಹಕರು ಪಡೆದುಕೊಳ್ಳಬೇಕು. ಗ್ರಾಹಕರಿಗೆ ಕಳಪೆ ದರ್ಜೆಯ ಪದಾರ್ಥಗಳನ್ನು ಮಾರಾಟ ಮಾಡಿದರೆ ಅದಕ್ಕೆ ಮಾರಾಟಗಾರರೇ ಹೊಣೆಗಾರರಾಗುತ್ತಾರೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಶೋಕ್ ಜಿ.ನಿಜಗಣ್ಣವರ್ ಎಚ್ಚರಿಕೆ ನೀಡಿದರು.   ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಹಕ ಹಕ್ಕುಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಅರಿವು ಉಂಟಾಗುತ್ತಿದ್ದು, ಇದರಲ್ಲಿ ಸುದ್ದಿ ಮಾಧ್ಯಮಗಳ ಪಾತ್ರವೂ ಅಪಾರವಾಗಿದೆ. ವಸ್ತುಗಳ ಗುಣಮಟ್ಟ ಮತ್ತು ದರದಲ್ಲಿ ಗ್ರಾಹಕರು ವಂಚನೆಗೆ ಒಳಗಾದರೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ ದೂರು ನೀಡಿ ಪರಿಹಾರ ಪಡೆಯಬಹುದಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ ಮಾತನಾಡಿದರು.ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಸದಸ್ಯರಾದ ಎ.ಎಸ್. ಹೇಮಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಂಚನೆಗೆ ಒಳಗಾದ ಕುರಿತು ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ ದೂರು ನೀಡಿದರೆ ಮೂರು ತಿಂಗಳೊಳಗೆ ತೀರ್ಪು ನೀಡಿ ಅತಿ ಕಡಿಮೆ ಖರ್ಚಿನಲ್ಲಿ ಪರಿಹಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.  ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ಈವರೆಗೆ ದಾಖಲಾದ 3239 ಪ್ರಕರಣಗಳಲ್ಲಿ 3177 ಇತ್ಯರ್ಥವಾಗಿ ಕೇವಲ 62 ಪ್ರಕರಣಗಳು ಬಾಕಿ ಉಳಿದಿವೆ. ಬ್ಯಾಂಕ್-223, ವಿಮೆ 427, ದೂರವಾಣಿ 187, ವಿದ್ಯುತ್ 204 ಮತ್ತು ಇತರೆ 1884 ಇತರೆ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿವೆ ಎಂದು ಅವರು ಮಾಹಿತಿ ನೀಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ  ಕೆ.ಎಂ.ಚಂದ್ರೇಗೌಡ, ಎಂ.ಪಿ.ಸುನಿಲ್    ಸುಬ್ರಮಣಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ  ಇಲಾಖೆಯ ವ್ಯವಸ್ಥಾಪಕರಾದ ರಾಜಶೇಖರ್, ಕೃಷ್ಣಮೂರ್ತಿ, ಉತ್ತಯ್ಯ ಮತ್ತಿತರರು ಇದ್ದರು.ಕಡಗದಾಳು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಗಣೇಶ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.