ಗುರುವಾರ , ಏಪ್ರಿಲ್ 22, 2021
30 °C

ಕಾಮಗಾರಿ ವಿಳಂಬ: ಅಧಿಕಾರಿಗಳ ವಿರುದ್ಧ ಈಶ್ವರಪ್ಪ ಆಕ್ರೋಶ

.ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ನಗರದ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಗಳಿಗೂ ಕಾಲಮಿತಿ ನಿಗದಿ ಮಾಡಿ; ಕಾಲಮಿತಿಯಲ್ಲಿ ಕಾಮಗಾರಿ ಮುಗಿಸದ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಿ, ಜೈಲಿಗೆ ಕಳುಹಿಸಿ ಎಂದು ಉಪ ಮುಖ್ಯಮಂತ್ರಿ ಹಾಗೂ ಸ್ಥಳೀಯ ಶಾಸಕರೂ ಆದ ಕೆ.ಎಸ್. ಈಶ್ವರಪ್ಪ ಆಕ್ರೋಶದಿಂದ ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಗರದ ಅಭಿವೃದ್ಧಿ ಕಾಮಗಾರಿಗಳು ವಿಳಂಬ ಆಗುತ್ತಿರುವುದಕ್ಕೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ನೆಹರೂ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಡಿ. 20ರಂದು ರಸ್ತೆ ಉದ್ಘಾಟನೆಯಾಗಬೇಕು. ತಪ್ಪಿದ್ದಲ್ಲಿ ನೀವು ಊರು ಖಾಲಿ ಮಾಡಬೇಕಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನೇರವಾಗಿ ಎಚ್ಚರಿಕೆ ನೀಡಿದರು.ಸರ್ಕಾರ ಹಣ ಬಿಡುಗಡೆ ಮಾಡಿದರೂ ಕೆಲಸ ಮಾಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಈ ರೀತಿಯ ಕೆಲಸ ಮಾಡಿದರೆ ನಿಮ್ಮನ್ನು ಶಿವಮೊಗ್ಗದಲ್ಲಿ ಇಟ್ಟುಕೊಳ್ಳುವುದಿಲ್ಲ. ನಿಮ್ಮಂತಹವರ ಅವಶ್ಯಕತೆಯೂ ಇಲ್ಲ ಎಂದು ಕಿಡಿಕಾರಿದರು.ವಿದ್ಯಾನಗರ ರಸ್ತೆ ವಿಸ್ತರಣೆಗೆ ಸುಮಾರು ್ಙ 20 ಕೋಟಿ ಅಂದಾಜು ಪಟ್ಟಿ ತಯಾರಿಸಲಾಗಿದೆ. ಆದರೆ ಮುಖ್ಯಕಾರ್ಯದರ್ಶಿಗಳು ್ಙ 8 ಕೋಟಿಗೆ ಅನುಮೋದನೆ ನೀಡಿದ್ದಾರೆ ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.ಎನ್.ಟಿ. ರಸ್ತೆ ವಿಸ್ತರಣೆಗೆ ಕುರಿತಂತೆಯೂ ನಿಗದಿಗಿಂತ ಕಡಿಮೆ ಅಂದಾಜು ಪಟ್ಟಿ ಸಿದ್ಧಪಡಿಸಿರುವುದಕ್ಕೆ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.ವಿದ್ಯಾನಗರ ಹಾಗೂ ಎನ್.ಟಿ.ರಸ್ತೆ ವಿಸ್ತರಣೆ ಕುರಿತಂತೆ ನ. 29ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು. ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಬರಬೇಕು ಎಂದು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.ಆಶ್ರಯ ಯೋಜನೆ ಮನೆಗಳ ನಿರ್ಮಾಣ ವಿಷಯದಲ್ಲಿಯೂ ವಿಳಂಬವಾಗಬಾರದು. ಒಂದು ವೇಳೆ ವಿಳಂಬವಾದರೆ ಅಂತಹ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣ ಹಾಕಿ ಜೈಲಿಗೆ ಕಳುಹಿಸಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.ಸಭೆಯಲ್ಲಿ ನಗರಸಭಾಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಸೂಡಾ ಅಧ್ಯಕ್ಷ ಎಸ್. ದತ್ತಾತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.