ಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ

7

ಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ

Published:
Updated:

ಬೆಂಗಳೂರು:  ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸಲಿರುವ ಕೂಲಿ ಕಾರ್ಮಿಕರಿಗೆ ಆನ್‌ಲೈನ್ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವ (ಇಎಫ್‌ಎಂಎಸ್) ಸೌಲಭ್ಯವನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಜಗದೀಶ್ ಶೆಟ್ಟರ್ ಬುಧವಾರ ಇಲ್ಲಿ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಯಲ್ಲಿ ಸಾರ್ವಜನಿಕರ ಕುಂದುಕೊರತೆ ನಿವಾರಣಾ ಕೋಶ `ಜನಮಿತ್ರ~ ಸೇವಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, `ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ಜಾರಿಗೆ ತರಲಾಗಿದೆ. ಇದರಿಂದ ನೇರವಾಗಿ ಕೂಲಿ ಕಾರ್ಮಿಕರ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲಿದೆ~ ಎಂದರು.`ದೇಶದಲ್ಲಿಯೇ ಪ್ರಥಮ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಈ ಸೌಲಭ್ಯ ಜಾರಿಗೆ ತರಲಾಗಿದೆ. ಪ್ರಾಯೋಗಿಕವಾಗಿ ಏಳು ಜಿಲ್ಲೆಗಳಲ್ಲಿ ಯೋಜನೆ ಜಾರಿಗೆ ತರಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲು ಸರ್ಕಾರ ಉದ್ದೇಶಿಸಿದೆ~ ಎಂದು ಅವರು ತಿಳಿಸಿದರು.ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಹುದ್ದೆಗಳನ್ನು ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು ನಿರ್ವಹಿಸುವುದನ್ನು ತಪ್ಪಿಸಲು ಸಿಬ್ಬಂದಿ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಶೀಘ್ರ ನೇರ ನೇಮಕಾತಿ ಮೂಲಕ 60 ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು. ಇದಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ ಖಾಲಿಯಿರುವ 400 ಎಂಜಿನಿಯರ್‌ಗಳ ನೇಮಕಾತಿಗೆ ಅನುಮತಿ ನೀಡುವಂತೆ ಕೋರಿ ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಈಗಾಗಲೇ 2500 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಕೆಪಿಎಸ್‌ಸಿ ಮೂಲಕ ಇನ್ನುಳಿದ 1350 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶೆಟ್ಟರ್ ತಿಳಿಸಿದರು.5 ಕೋಟಿ ಬಿಡುಗಡೆಗೆ ಮನವಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎನ್. ಬಚ್ಚೇಗೌಡ ಮಾತನಾಡಿ, ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಐದು ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಸಚಿವ ಶೆಟ್ಟರ್ ಅವರಲ್ಲಿ ಮನವಿ ಮಾಡಿದರು.ಈ ವರ್ಷ ಕುಡಿಯುವ ನೀರಿಗಾಗಿ ಸರ್ಕಾರ ಕ್ರಿಯಾ ಯೋಜನೆಯಡಿ 32 ಕೋಟಿ ರೂಪಾಯಿಗಳನ್ನು ನೀಡಿದೆ. ಆದರೆ, ಬೇಸಿಗೆಯಲ್ಲಿ ಜಿಲ್ಲೆಯ 107 ಗ್ರಾಮಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದೆ. ಇಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಬೇಕಾಗಿದೆ ಎಂದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1200 ಅಡಿ ಕೊಳವೆಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಶೇ 35ರಿಂದ 40ರಷ್ಟು ಕೊಳವೆಬಾವಿಗಳು ವಿಫಲವಾಗುತ್ತಿವೆ. ಈ ವರ್ಷ ಬಹುಬೇಗನೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಹೀಗಾಗಿ, ರೈತರ ಮನವೊಲಿಸಿ ಬೆಳೆಗಳಿಗೆ ಉಪಯೋಗಿಸುವ ನೀರನ್ನು ಕುಡಿಯುವುದಕ್ಕಾಗಿ ಖರೀದಿಸಲು ಪ್ರಯತ್ನ ನಡೆದಿದೆ ಎಂದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ನಿರ್ದೇಶಕಿ ಎಂ. ದೀಪಾ, ಬೆಂಗಳೂರು ಗ್ರಾಮಾಂತರ ಜಿ.ಪಂ. ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ಶಾಂತಮ್ಮ, ಸಿಇಒ ಬೆಟ್ಟಸ್ವಾಮಿ ಉಪಸ್ಥಿತರಿದ್ದರು.ಏನಿದು `ಜನಮಿತ್ರ~?

ಜಿಲ್ಲಾ ಪಂಚಾಯ್ತಿ ಹಾಗೂ ಅದರ ಅಧೀನ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ಮುಖ್ಯ ಉದ್ದೇಶದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಯಲ್ಲಿ `ಜನಮಿತ್ರ ನಿವಾರಣಾ ಕೋಶ~ವನ್ನು ಪ್ರಾರಂಭಿಸಲಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಜಾರಿಗೆ ತಂದಿರುವ `ಜನಮಿತ್ರ ನಿವಾರಣಾ ಕೋಶ~ವನ್ನು ಪ್ರಾಯೋಗಿಕವಾಗಿ ಬೆಂಗಳೂರು ಗ್ರಾಮಾಂತರ ಜಿ.ಪಂ.ನಲ್ಲಿ ಆರಂಭಿಸಲಾಗಿದೆ. ಸಾರ್ವಜನಿಕರು ವೆಬ್‌ಸೈಟ್, ದೂರವಾಣಿ, ಅಂಚೆ ಅಥವಾ ಮೊಬೈಲ್ ಮೂಲಕ ಕುಂದುಕೊರತೆಗಳ ಬಗ್ಗೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ದಿನದ 24 ಗಂಟೆಯೂ ಈ ಕೇಂದ್ರ ಕಾರ್ಯನಿರ್ವಹಿಸಲಿದೆ.ದೂರುಗಳ ಸ್ಥಿತಿಗತಿ ಬಗ್ಗೆ ಎಸ್‌ಎಂಎಸ್ ಮೂಲಕ ದೂರುದಾರರಿಗೆ ಮಾಹಿತಿ ರವಾನಿಸಲಾಗುತ್ತದೆ. ಜಿ.ಪಂ. ವ್ಯಾಪ್ತಿಗೆ ಬರುವ ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ, ವಸತಿ, ಪಶು ಸಂಗೋಪನೆ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳಿಗೆ ಸಂಬಂಧಿಸಿದಂತೆ ದೂರು ದಾಖಲಿಸಬಹುದು. ಕುಂದುಕೊರತೆಗೆ ಪರಿಹಾರ ಸಿಗುವವರೆಗೆ ಪ್ರಕರಣದ ಬಗ್ಗೆ ಗಮನಹರಿಸಲಾಗುತ್ತದೆ.ಇದಲ್ಲದೆ, ಕರ್ನಾಟಕ ನಾಗರಿಕ ಸೇವಾ ಖಾತರಿ ಅಧಿನಿಯಮದಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ವ್ಯಾಪ್ತಿಗೆ ಬರುವ 10 ಸೇವೆಗಳನ್ನೂ ಈ ಕೇಂದ್ರದ ವ್ಯಾಪ್ತಿಗೆ ತರಲಾಗಿದೆ.ಸಾರ್ವಜನಿಕರು ದೂರು ಸಲ್ಲಿಸಲು ಕೋಶದ ದೂರವಾಣಿ ಸಂಖ್ಯೆ: 080-22262555 ಅಥವಾ ವೆಬ್‌ಸೈಟ್ ವಿಳಾಸ: www.janmitra.in

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry