ಶುಕ್ರವಾರ, ನವೆಂಬರ್ 15, 2019
22 °C

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ತಮಿಳುನಾಡು ಆಗ್ರಹ

Published:
Updated:

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿಸಿತು.ಮುಖ್ಯ ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಅವರನ್ನು ಒಳಗೊಂಡ ತ್ರಿಸದಸ್ಯ ಸುಪ್ರೀಂಕೋರ್ಟ್ ಪೀಠ, ತಮಿಳುನಾಡು ಅರ್ಜಿ ವಿಚಾರಣೆಯನ್ನು ಈ ತಿಂಗಳ 22ರಂದು ನಡೆಸುವುದಾಗಿ ತಿಳಿಸಿತು.ಕಾವೇರಿ ನ್ಯಾಯಮಂಡಳಿ ತನ್ನ ಅಂತಿಮ ತೀರ್ಪಿನಲ್ಲಿ ಶಿಫಾರಸು ಮಾಡಿರುವ ನೀರು ನಿರ್ವಹಣಾ ಮಂಡಳಿ ಹಾಗೂ ನೀರು ನಿಯಂತ್ರಣಾ ಸಮಿತಿ ರಚಿಸುವಂತೆ ಕೇಂದ್ರಕ್ಕೆ ಸೂಚಿಸುವಂತೆ ತಮಿಳುನಾಡು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿದೆ. ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ಹಾಜರಾದ ತಮಿಳುನಾಡು ಪರ ವಕೀಲ ಸಿ,.ಎಸ್. ವೈದ್ಯನಾಥನ್, ತುರ್ತಾಗಿ ಮಧ್ಯಂತರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.ಕಾವೇರಿ ನ್ಯಾಯಮಂಡಳಿ ಅಂತಿಮ ತೀರ್ಪು ಅಧಿಸೂಚನೆ ಹೊರಡಿಸಿದ ಬಳಿಕ ನೀರು ನಿರ್ವಹಣಾ ಮಂಡಳಿ ಹಾಗೂ ನೀರು ನಿಯಂತ್ರಣ ಸಮಿತಿ ರಚಿಸಲು ಕೇಂದ್ರ ಸರ್ಕಾರ ಮುಂದಾಗಿಲ್ಲ. ಈ ಸಂಬಂಧ ಪ್ರಧಾನಿ ಮತ್ತು ಸಂಬಂಧಪಟ್ಟ ಇಲಾಖೆಗೆ ರಾಜ್ಯದ ಮುಖ್ಯಮಂತ್ರಿ ಎರಡು ಪತ್ರ ಬರೆದಿದ್ದರೂ ಪ್ರಯೋಜನವಾಗಿಲ್ಲ. ಪತ್ರಕ್ಕೆ ಉತ್ತರಿಸುವ ಸೌಜನ್ಯವನ್ನು ಕೇಂದ್ರ ಸರ್ಕಾರ ತೋರಿಲ್ಲ ಎಂದು ತಮಿಳುನಾಡು ಅರ್ಜಿಯಲ್ಲಿ ಪ್ರಸ್ತಾಪಿಸಿದೆ.2013ರ ಜೂನ್‌ನಿಂದ ಮುಂಗಾರು ಆರಂಭವಾಗಲಿದ್ದು ಅಷ್ಟರೊಳಗೆ ನೀರು ನಿರ್ವಹಣಾ ಮಂಡಳಿ ಹಾಗೂ ನೀರು ನಿಯಂತ್ರಣ ಸಮಿತಿ ರಚಿಸಲು ನಿರ್ದೇಶನ ಕೊಡಬೇಕೆಂದು ತಮಿಳುನಾಡು ಮನವಿ ಮಾಡಿದೆ. ಕೇಂದ್ರ ಸರ್ಕಾರ ಫೆ. 19ರಂದು ಕಾವೇರಿ ನ್ಯಾಯಮಂಡಳಿ ಅಂತಿಮ ತೀರ್ಪು ಅಧಿಸೂಚನೆ ಹೊರಡಿಸಿದೆ.

ಪ್ರತಿಕ್ರಿಯಿಸಿ (+)