ಗುರುವಾರ , ಏಪ್ರಿಲ್ 15, 2021
24 °C

ಕೀಟಜನ್ಯ ರೋಗ ನಿಯಂತ್ರಣ-ಮಕ್ಕಳಲ್ಲಿ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೀಟಜನ್ಯ ರೋಗಗಳ ನಿಯಂತ್ರಣದ ಬಗ್ಗೆ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳುವ ಉದ್ದೇಶವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್. ವಿಜಯಪ್ರಕಾಶ್ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆರ್‌ಎಪಿಸಿಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಕೀಟಜನ್ಯ ರೋಗಗಳ ನಿಯಂತ್ರಣ ಕಾರ್ಯಾಗಾರ ಬಗ್ಗೆ ಮಾಹಿತಿ ಹಾಗೂ ಮಾಧ್ಯಮ ಪ್ರತಿನಿಧಿಗಳ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ದ.ಕ.ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಕೀಟಜನ್ಯ ರೋಗಗಳ ಪ್ರಮಾಣ ಹೆಚ್ಚಾಗಿದೆ. ನಗರ ಪ್ರದೇಶದಲ್ಲಿ ಮಲೇರಿಯಾ ಹೆಚ್ಚಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಡೆಂಗೆ ಹೆಚ್ಚಿದೆ. ಮಲೇರಿಯಾ ಪ್ರಮಾಣದಲ್ಲಿ ದ.ಕ. ಜಿಲ್ಲೆ ಮೊದಲ ಸ್ಥಾನದಲ್ಲಿದೆ. ರಾಜ್ಯದ ಶೇ 25 ರಷ್ಟು ಮಲೇರಿಯಾ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಇದೆ. ಈ ನಿಟ್ಟಿನಲ್ಲಿ ಕೀಟಜನ್ಯ ರೋಗಗಳ ಬಗ್ಗೆ ಮಾಹಿತಿ ಹಾಗೂ ಜಾಗೃತಿ ಹೆಚ್ಚಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.ಮಕ್ಕಳಿಂದ ಜಾಗೃತಿ: ಈ ಸಂಬಂಧ ರೋಗ ನಿಯಂತ್ರಣಕ್ಕೆ ಮಕ್ಕಳನ್ನು ಬಳಸಿಕೊಳ್ಳಲು ಜಿಲ್ಲಾ ಪಂಚಾಯಿತಿ ಚಿಂತನೆ ನಡೆಸಿದೆ. ಜಿಲ್ಲೆಯಲ್ಲಿ ಒಟ್ಟು 1454 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, 474 ಪ್ರೌಢಶಾಲೆಗಳಿವೆ. ಈ ಶಾಲೆಗಳಲ್ಲಿ ಒಟ್ಟು 3,14,000 ಮಕ್ಕಳು ಓದುತ್ತಿದ್ದಾರೆ. ಪ್ರತಿನಿತ್ಯ ಬೆಳಿಗ್ಗೆ ಶಾಲೆಯ ಪ್ರಾರ್ಥನಾ ಸಮಯದ ನಂತರ ಆರೋಗ್ಯದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.10 ನಿಮಿಷ ಕಾಲದ ಈ ಮಾಹಿತಿ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಮೂಲಕ ಮುನ್ನೆಚ್ಚರಿಕೆ ನೀಡಲಾಗುವುದು. ಬೇಸಿಗೆ, ಚಳಿ ಹಾಗೂ ಮಳೆಗಾಲದಲ್ಲಿನ ರೋಗಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ಔಷಧ, ಚಿಕಿತ್ಸೆ ರೀತಿ- ನೀತಿಗಳ ಬಗ್ಗೆ ಜಾಗೃತರನ್ನಾಗಿ ಮಾಡುವ ಪ್ರಯತ್ನವಿದು ಎಂದರು. ನಮ್ಮಲ್ಲಿ  ಜಲಸಾಕ್ಷರತೆ ಜತೆಗೆ ಆರೋಗ್ಯ ಸಾಕ್ಷರತೆಯೂ ಅಷ್ಟೇ ಪ್ರಾಮುಖ್ಯತೆ ನೀಡಬೇಕು. ಇದರಿಂದ ರೋಗ ನಿಯಂತ್ರಣ ಉತ್ತಮ ರೀತಿಯಲ್ಲಿ ಆಗಲಿದೆ ಎಂದರು.ಇದಕ್ಕೂ ಮುನ್ನ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಅಧಿಕಾರಿ ಡಾ.ಒ.ಆರ್. ಶ್ರೀರಂಗಪ್ಪ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2011 ರಲ್ಲಿ 3048 ಮಲೇರಿಯಾ ಪ್ರಕರಣ ದಾಖಲಾಗಿದ್ದು, 2012 ರಲ್ಲಿ 3610 ಪ್ರಕರಣ ದಾಖಲಾಗಿದ್ದು, ಹೆಚ್ಚಳವಾಗಿರುವುದು ಖಚಿತ. ಡೆಂಗಿ ಸಹ ಹೆಚ್ಚಳವಾಗಿದ್ದು, 2011 ರಲ್ಲಿ 144 ಇದ್ದ ಪ್ರಕರಣ, 2012 ರಲ್ಲಿ ಈಗಾಗಲೇ 129 ಪ್ರಕರಣ ದಾಖಲಾಗಿದೆ. ನಗರಪಾಲಿಕೆ ವ್ಯಾಪ್ತಿಯಲ್ಲೇ 41 ಪ್ರಕರಣ ದಾಖಲಾಗಿದೆ.

 

ಈ ನಿಟ್ಟಿನಲ್ಲಿ ರೋಗ ನಿಯಂತ್ರಣಕ್ಕೆ ಸೂಕ್ತ ಕ್ರಮ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ ಎಂದು ಅವರು ಹೇಳಿದರು.ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ರೈ, ವಾರ್ತಾಧಿಕಾರಿ ರೋಹಿಣಿ ಅತಿಥಿಗಳಾಗಿದ್ದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಅರುಣ್ ಕುಮಾರ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.