ಬುಧವಾರ, ಮೇ 18, 2022
27 °C

ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ಶ್ರೀರಾಮಪುರ ಸಮೀಪದ ಲಕ್ಷ್ಮಿನಾರಾಯಣಪುರ ನಿವಾಸಿಗಳು ವಿವಿಧ ಜನಪರ ಸಂಘಟನೆಗಳ ಸದಸ್ಯರೊಂದಿಗೆ ನಗರದಲ್ಲಿ ಶನಿವಾರ ಪ್ರತಿಭಟನೆ ಮಾಡಿದರು.ಲಕ್ಷ್ಮಿನಾರಾಯಣಪುರ ಎಂಟನೇ ಅಡ್ಡರಸ್ತೆಯಲ್ಲಿ ಖಾಲಿ ಬಿಂದಿಗೆಗಳನ್ನು ಇಟ್ಟು ಪ್ರತಿಭಟನೆ ಮಾಡಿದ ಸ್ಥಳೀಯರು ‘ಸುತ್ತಮುತ್ತಲಿನ ಬಡಾವಣೆಗಳಲ್ಲಿ ಮೂರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಸಂಬಂಧ ಜಲಮಂಡಳಿ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.‘ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಬಿಬಿಎಂಪಿ ಸದಸ್ಯರಿಗೂ ಹಲವು ಬಾರಿ ದೂರು ನೀಡಲಾಗಿದೆ. ಆದರೆ ಅವರು ಸಹ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಪ್ರತಿನಿತ್ಯ ತೊಂದರೆ ಅನುಭವಿಸುವಂತಾಗಿದೆ. ಅಲ್ಲದೇ ಹಣ ಕೊಟ್ಟು ನೀರು ಕೊಂಡುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದು ಅವರು ದೂರಿದರು.‘ಎರಡು ದಿನಗಳಿಗೊಮ್ಮೆ ಕೇವಲ ಒಂದು ತಾಸು ಮಾತ್ರ ನೀರು ಪೂರೈಸಲಾಗುತ್ತಿದೆ.  ನೀರು ಪೂರೈಸದಿದ್ದರೂ, ನೀರಿನ ಶುಲ್ಕವನ್ನು ಮಾತ್ರ ಕಟ್ಟಿಸಿಕೊಳ್ಳುತ್ತಿದೆ’ ಪ್ರತಿಭಟನಾಕಾರರು ಆರೋಪಿಸಿದರು. ಸಮರ್ಪಕ ರೀತಿಯಲ್ಲಿ ನೀರು ಪೂರೈಸದಿದ್ದರೆ ಜಲಮಂಡಳಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.ಪ್ರತಿಭಟನಾನಿರತರು ರಸ್ತೆಯಲ್ಲೇ ಬಿಂದಿಗೆಗಳನ್ನು ಇಟ್ಟು ರಸ್ತೆ ತಡೆ ಮಾಡಿದ್ದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ ಹಾಗೂ ಸಿಐಟಿಯು ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.