ಶನಿವಾರ, ಮೇ 21, 2022
25 °C

ಕುಡಿಯುವ ನೀರಿನ ಅಭಾವ: ಮುಂಜಾಗ್ರತೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಪ್ರಸ್ತುತ ಬೇಸಿಗೆ ಸಮೀಪಿಸುತ್ತಿದೆ. ಹೀಗಾಗಿ, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆಗೆ ಅಭಾವ ತಲೆದೋರದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಅಮರನಾರಾಯಣ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿಯ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಸೋಮವಾರ ಅಭಿವೃದ್ಧಿ ಕಾರ್ಯಕ್ರಮಗಳ ಸಂಬಂಧ ನೇಮಕವಾಗಿರುವ ಹೋಬಳಿ ಉಸ್ತುವಾರಿ ಅಧಿಕಾರಿಗಳ ಕಾರ್ಯ ನಿರ್ವಹಣೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಗ್ರಾಮೀಣರಿಗೆ ವಿವಿಧ ಯೋಜನೆಯ ಸವಲತ್ತು ಸಮರ್ಪಕವಾಗಿ ತಲುಪಲು ಅಧಿಕಾರಿಗಳು ಶ್ರಮವಹಿಸಬೇಕು. ಜಿಲ್ಲೆಯಲ್ಲಿ ಇಲಾಖಾ ಕಾರ್ಯಕ್ರಮಗಳು ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಗತವಾಗಬೇಕು. ಈ ನಿಟ್ಟಿನಲ್ಲಿ ಉಸ್ತುವಾರಿ ವಹಿಸಿಕೊಂಡಿರುವ ಜಿಲ್ಲಾಮಟ್ಟದ ಅಧಿಕಾರಿಗಳು ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಬೇಕು. ಅಲ್ಲಿನ ಶೈಕ್ಷಣಿಕ, ಸಾಮಾಜಿಕ ಹಾಗೂ ಇತರೇ ಅಭಿವೃದ್ಧಿ ಕಾರ್ಯಗಳ ಪರೀಕ್ಷೆ ನಡೆಸಬೇಕು ಎಂದರು.ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಭೇಟಿ ನೀಡಿ ಬಿಸಿಯೂಟದ ಬಗ್ಗೆ ಪರಿಶೀಲಿಸಬೇಕು. ನಿಗದಿಪಡಿಸಿರುವ ಪಟ್ಟಿಗೆ ಅನುಗುಣವಾಗಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಆಹಾರ ನೀಡಲಾಗುತ್ತಿದೆಯೇ? ಎಂಬ ಬಗ್ಗೆ ನಿಗಾವಹಿ ಸಬೇಕು. ಜತೆಗೆ, ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು. ಜತೆಗೆ, ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ವೈದ್ಯಕೀಯ ಸೌಲಭ್ಯದ ಪರಿಶೀಲನೆ ನಡೆಸಬೇಕು. ಔಷಧಿ ದಾಸ್ತಾನು  ಪರಿಶೀಲನೆಗೆ ಒತ್ತು ನೀಡಬೇಕು. ಅವಶ್ಯವಿರುವ ಸೌಲಭ್ಯ ಒದಗಿಸಲು ಪಟ್ಟಿ ಮಾಡಬೇಕು ಎಂದರು.ಅಂಗನವಾಡಿ ಕೇಂದ್ರ, ವಸತಿನಿಲಯ, ಗ್ರಾಮ ಪಂಚಾಯಿತಿ, ನೆಮ್ಮದಿ ಕೇಂದ್ರ, ನ್ಯಾಯಬೆಲೆ ಅಂಗಡಿ ಸೇರಿದಂತೆ ಇತರೇ ಕಚೇರಿ, ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರದ ಅನುದಾನ ಸದ್ಬಳಕೆಯಾಗಲು ನಿಗಾವಹಿಸಬೇಕು ಎಂದು ಹೇಳಿದರು. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಸುಂದರನಾಯಕ್, ಉಪ ಕಾರ್ಯದರ್ಶಿ ಗೂಡೂರು ಭೀಮಸೇನ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಂ. ಶಿವಮಲ್ಲು, ಡಿಡಿಪಿಐ ಬಿ.ಎ. ರಾಜಶೇಖರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಿ.ಆರ್. ಗಿರೀಶ್, ಆಹಾರ ಇಲಾಖೆಯ ಉಪ ನಿರ್ದೇಶಕ ಡಾ.ಎಸ್.ಇ. ಮಹದೇವಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎಸ್. ಪ್ರತಿಭಾ ಇತರರು ಸಭೆಯಲ್ಲಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.