ಕುಡಿಯುವ ನೀರಿನ ಸಮಸ್ಯೆಗೆ ಜಿಲ್ಲಾಧಿಕಾರಿಗಳೇ ಹೊಣೆ

ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡರೆ ಜಿಲ್ಲಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಿನ ಕೊರತೆ ನೀಗಿಸಲು ಸಮರೋಪಾದಿಯಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ರೂ. 516 ಕೋಟಿ ಹಣ ಲಭ್ಯವಿದ್ದು, ಕುಡಿಯುವ ನೀರು ಸರಬರಾಜಿಗೆ ಹಣದ ಕೊರತೆ ಇಲ್ಲ. ಕುಡಿಯುವ ನೀರು, ಮೇವಿನ ವ್ಯವಸ್ಥೆ ಮಾಡಲು, ಉದ್ಯೋಗ ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.
ಅಗತ್ಯವಿರುವ ಕಡೆ ಗೋಶಾಲೆಗಳನ್ನು ತೆರೆಯಲು, ಮೇವು ಬೆಳೆಯಲು ಕ್ರಮಕೈಗೊಳ್ಳುವಂತೆ ಸ್ಪಷ್ಟ ಆದೇಶ ನೀಡಲಾಗಿದೆ. ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನಾ ಇಲಾಖೆಯ ಫಾರಂಗಳಲ್ಲಿ ಮೇವು ಬೆಳೆಯಲು ಸೂಚಿಸಲಾಗಿದೆ. ಅಲ್ಲದೆ ರೈತರಿಗೂ ಮೇವು ಬೆಳೆಯಲು ಉತ್ತೇಜನ ನೀಡಿ ಅವರಿಂದಲೂ ಖರೀದಿ ಮಾಡಲಾಗುವುದು ಎಂದರು.
ಶಾಸಕರ ಅಧ್ಯಕ್ಷತೆಯ ಕಾರ್ಯ ಪಡೆಗಳು ತುರ್ತಾಗಿ ಕ್ರಿಯಾ ಯೋಜನೆ ರೂಪಿಸಿ, ಆ ಪ್ರಕಾರ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ವಿವರಿಸಿದರು. ರಾಜ್ಯದ 125 ತಾಲ್ಲೂಕುಗಳಲ್ಲಿ ಬರ ಇದೆ. ಇವುಗಳ ವ್ಯಾಪ್ತಿಯ 10,163 ಜನವಸತಿಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಇದೆ. 1,086 ಹಳ್ಳಿಗಳಿಗೆ 1,255 ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ನುಡಿದರು.
ಅದೇ ರೀತಿ 45 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 399 ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಅಗತ್ಯವಿರುವ ಕಡೆ ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ವಿವರಿಸಿದರು.
ವಲಸೆ ತಡೆಯಲು ಕ್ರಮ: ವಿಜಾಪುರ, ಕೊಪ್ಪಳ, ಬಾಗಲಕೋಟೆ, ರಾಯಚೂರು, ಗುಲ್ಬರ್ಗ, ಯಾದಗಿರಿ ಮೊದಲಾದ ಜಿಲ್ಲೆಗಳಲ್ಲಿ ಜನ ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ನೀಡುವಂತೆ ಸೂಚಿಸಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರೂ. 439 ಕೋಟಿ ಲಭ್ಯವಿದ್ದು, ಆ ಹಣವನ್ನು ಬಳಸಿಕೊಂಡು ಕೆಲಸ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದರು.
ವಿರೋಧ ಪಕ್ಷಗಳ ಮುಖಂಡರು ರಾಜಕಾರಣ ಮಾಡುವುದಕ್ಕಾಗಿ ಟೀಕೆ ಮಾಡುತ್ತಿವೆ ಅಷ್ಟೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಸುಮ್ಮನೇ ಬೊಬ್ಬೆ ಹಾಕುತ್ತಿದ್ದಾರೆ ಎಂದು ಟೀಕಿಸಿದರು. ಸಚಿವರಾದ ವಿ.ಶ್ರೀನಿವಾಸ ಪ್ರಸಾದ್, ಎಚ್.ಕೆ.ಪಾಟೀಲ, ಟಿ.ಬಿ.ಜಯಚಂದ್ರ, ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.