ಭಾನುವಾರ, ಜೂನ್ 20, 2021
26 °C

ಕುಡಿಯುವ ನೀರಿನ ಸಮಸ್ಯೆ: ಕ್ರಮಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ತಲೆದೋರದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು~ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪ್ರದೀಪ್‌ಸಿಂಗ್ ಖರೋಲ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಬರಪರಿಹಾರ ನಿರ್ವಹಣೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಈಗಾಗಲೇ, ಬೇಸಿಗೆ ಆರಂಭವಾಗಿದೆ. ಗ್ರಾಮ ಮತ್ತು ನಗರ ಪ್ರದೇಶದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ತೆಗೆದುಕೊಳ್ಳಬೇಕು. ಹೋಬಳಿಮಟ್ಟದ ನೋಡೆಲ್ ಅಧಿಕಾರಿಗಳು ಪ್ರವಾಸ ಮಾಡಿ ಕುಡಿಯುವ ನೀರು, ಆರೋಗ್ಯ, ಜಾನುವಾರುಗಳಿಗೆ ಮೇವಿನ ಪರಿಸ್ಥಿತಿ ಅಧ್ಯಯನ ಮಾಡಿ ವರದಿ ನೀಡಬೇಕು ಎಂದರು.ಜಿಲ್ಲಾಧಿಕಾರಿಗಳು ಪ್ರತಿವಾರ ನೋಡೆಲ್ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯ ಯಾವ ಭಾಗದಲ್ಲಿ ಕಾಣಿಸಿಕೊಳ್ಳಲಿದೆ ಎಂಬ ಬಗ್ಗೆ ಪೂರ್ವ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.ಜಿ.ಪಂ. ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಕೆ. ರಾಜು ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಪರಿಹರಿಸಲು 262 ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ 91 ಕಾಮಗಾರಿ ಪೂರ್ಣಗೊಂಡಿವೆ. ಈ ಮಾಸಾಂತ್ಯದೊಳಗೆ ಉಳಿದ ಕಾಮಗಾರಿ ಪೂರ್ಣಗೊಳ್ಳಲಿವೆ ಎಂದರು.ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರಶೇಖರ್ ಮಾತನಾಡಿ, ಗುಂಡ್ಲುಪೇಟೆ ತಾಲ್ಲೂಕು ಬರಗಿ ಫಾರಂನಲ್ಲಿ 100 ಟನ್, ಕೊಳ್ಳೇಗಾಲ ತಾಲ್ಲೂಕಿನ ಹನೂರು ಎಪಿಎಂಸಿಯಲ್ಲಿ 60 ಟನ್ ಮೇವು ಶೇಖರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿಗೆ ಮೇವು ಖರೀದಿಗೆ ಹಣ ಬಿಡುಗಡೆಯಾಗಿದ್ದು, ಖರೀದಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.ಬರಪರಿಹಾರ ಯೋಜನೆಯಡಿ 468.55 ಲಕ್ಷ ರೂ ವೆಚ್ಚದಡಿ 294 ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ. ಹೆಚ್ಚುವರಿಯಾಗಿ 12 ಕೋಟಿ ರೂ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.ಜಿಲ್ಲಾ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಸುಂದರರಾಜು ಮಾತನಾಡಿ, ಜಿಲ್ಲೆಯಲ್ಲಿ ಬರಪರಿಹಾರ ಯೋಜನೆಯಡಿ ಜನವರಿ ತಿಂಗಳಲ್ಲಿ 8 ಸಾವಿರ ಮೇವಿನ ಬೀಜದ ಕಿರುಪೊಟ್ಟಣ ವಿತರಿಸಲಾಗಿದೆ. ಒಟ್ಟು 2,050 ಹೆಕ್ಟೇರ್ ಪ್ರದೇಶದಲ್ಲಿ ಮೇವು ಉತ್ಪಾದನೆಗೆ ಕ್ರಮಕೈಗೊಳ್ಳಲಾಗಿದೆ ಎಂದರು.ಜಿಲ್ಲೆಯಲ್ಲಿ ಗೋಶಾಲೆ ತೆರೆಯುವ ಅಗತ್ಯ ಕಂಡುಬಂದಿಲ್ಲ. ಹಾಲಿನ ಉತ್ಪಾದನೆಯೂ ಕಡಿಮೆಯಾಗಿಲ್ಲ. ಪ್ರಸ್ತುತ ನಾಲ್ಕು ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ. ನವೆಂಬರ್ ತಿಂಗಳಿನಲ್ಲಿ ವಿತರಿಸಲಾದ ಮೇವಿನ ಬೀಜದ ಕಿರುಪೊಟ್ಟಣಗಳಿಂದ 13,600 ಟನ್ ಮೇವು ಉತ್ಪಾದಿಸಲಾಗಿದೆ ಎಂದು ವಿವರಿಸಿದರು.ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಸುಂದರನಾಯ್ಕ, ಉಪ ವಿಭಾಗಾಧಿಕಾರಿ ಎ.ಬಿ. ಬಸವರಾಜು ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.