ಶುಕ್ರವಾರ, ಮೇ 7, 2021
26 °C

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ:  ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕೂಡಲೇ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ  ಶುಭಾ ಕೃಷ್ಣಮೂರ್ತಿ ತಿಳಿಸಿದರು.ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಈ ಗ್ರಾಮಗಳಿಗೆ ಕೂಡಲೆ ಅನುದಾನ ನೀಡಬೇಕೆಂದು ಸದಸ್ಯರು ಒತ್ತಾಯಿಸಿದಾಗ, ಸಮಸ್ಯಾತ್ಮಕ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತಂತೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದರು.ಹಾಗೆಯೇ ಜಿಲ್ಲೆಯ ಟಾಸ್ಕ್ ಫೋರ್ಸ್ ಮೂಲಕವೂ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಪಡಿಸಲು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಆದರೂ, ಇಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಿಗೆ ಮಾಹಿತಿ ಇರುವುದಿಲ್ಲ. ಇದರಿಂದಾಗಿ ಜಿಲ್ಲಾ ಪಂಚಾಯ್ತಿ ಸದಸ್ಯರನ್ನು  ಟಾಸ್ಕ್‌ಫೋರ್ಸ್ ಸಮಿತಿಗೆ ಸದಸ್ಯರನ್ನಾಗಿ ಸೇರಿಸಿಕೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಸದಸ್ಯರ ಬೇಡಿಕೆಗೆ ಸ್ಪಂದಿಸಿ ಅಧ್ಯಕ್ಷರು ಮಾತನಾಡಿದರು.ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲೆಗೆ 13ನೇ ಹಣಕಾಸು ಯೋಜನೆಯಡಿ ್ಙ 55 ಲಕ್ಷ ಹಾಗೂ ಇತ್ತೀಚೆಗೆ ಸರ್ಕಾರದಿಂದ ್ಙ 20ಲಕ್ಷ ಅನುದಾನ ಬಂದಿರುವುದರಿಂದ ಸದಸ್ಯರುಗಳ ಬೇಡಿಕೆ ಮೇರೆಗೆ ಸಮಸ್ಯಾತ್ಮಕ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಈ ಅನುದಾನವನ್ನು ವಿನಿಯೋಗಿಸಲಾಗುವುದು ಎಂದು ಮುಖ್ಯಕಾರ್ಯ ನಿರ್ವಹಣಾಧಿಕಾರಿ ಸಂಜಯ್‌ಬಿಜ್ಜೂರು ಸಭೆಗೆ ಮಾಹಿತಿ ನೀಡಿದರು.ಸಾಗರ ತಾಲ್ಲೂಕಿನಲ್ಲಿಯೂ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದು, ತಾಲ್ಲೂಕಿನಲ್ಲಿ ಅಪೂರ್ಣಗೊಂಡಿರುವ 44 ತೆರೆದ ಬಾವಿಗಳನ್ನು ಪೂರ್ಣಗೊಳಿಸಿ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ವಿಶೇಷ ಅನುದಾನ ಒದಗಿಸಬೇಕು ಎಂದು ಲಲಿತಾ ನಾರಾಯಣ ತಿಳಿಸಿದರು. ಅಪೂರ್ಣಗೊಂಡಿರುವ ತೆರೆದ ಬಾವಿಗಳನ್ನು ಎನ್‌ಆರ್‌ಇಜಿ. ಯೋಜನೆಯಡಿ ಕೈಗೆತ್ತಿಕೊಂಡು ಪೂರ್ಣಗೊಳಿಸಬಹುದು ಎಂದು ಡಾ.ಸಂಜಯ್ ಬಿಜ್ಜೂರ್ ತಿಳಿಸಿದರು.ನೀರಿನ ಸಮಸ್ಯೆ ಹೊತ್ತು ಸಾರ್ವಜನಿಕರು ಜಿಲ್ಲಾ ಪಂಚಾಯ್ತಿ ಸದಸ್ಯರ ಬಳಿ ಬರುವುದರಿಂದ ಪ್ರತಿ ಜಿಲ್ಲಾ ಪಂಚಾಯತ್ ಸದಸ್ಯರಿಗೂ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸದಸ್ಯರು ಒತ್ತಾಯಿಸಿದರು.ಮಲೆನಾಡಿನ ಕೆಲ ಭಾಗದಲ್ಲಿ 10-15 ಮನೆಗಳಿರುವ ಕಡೆ ನೀರಿನ ಸಮಸ್ಯೆ ಉಂಟಾಗಿದ್ದು, ತೆರೆದ ಬಾವಿಗಳ ಮೂಲಕ ನೀರು ಕೊಡಲು ತುರ್ತಾಗಿ ವ್ಯವಸ್ಥೆ ಕಲ್ಪಿಸಬೇಕೆಂದು ಸದಸ್ಯರು ಕೇಳಿದಾಗ ಈ ವರ್ಷದ ಅನುದಾನದಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಿಇಓ ತಿಳಿಸಿದರು.ಜಿಲ್ಲೆಯ ಕೆಲಗ್ರಾಮಗಳಲ್ಲಿನ ನೀರಿನ ಸಮಸ್ಯೆಯನ್ನು ನಿವಾರಿಸಲು ಕೊಳವೆ ಬಾವಿಗಳನ್ನು ಕೊರೆಯಲಾಗಿದ್ದರೂ, ವಿದ್ಯುತ್ ಸಂಪರ್ಕ ಕಲ್ಪಿಸದಿರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ ಎಂದು ಸದಸ್ಯರು, ಅಧ್ಯಕ್ಷರ ಗಮನ ಸೆಳೆದಾಗ, ಈ ಏಪ್ರಿಲ್ ಅಂತ್ಯದ ಒಳಗಾಗಿ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷ ಎಚ್. ಗಂಗಾಧರಪ್ಪ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.