ಸೋಮವಾರ, ಅಕ್ಟೋಬರ್ 14, 2019
22 °C

ಕುಡಿಯುವ ನೀರು ಪೂರೈಕೆಗೆ ಆದ್ಯತೆ ವಹಿಸಿ

Published:
Updated:

ರಾಯಚೂರು:  ಕುಡಿಯುವ ನೀರು ಪೂರೈಕೆಗೆ ಅಧಿಕಾರಿಗಳು ಆದ್ಯತೆ ನೀಡಬೇಕು. ಶಿಕ್ಷಣ ಏಳ್ಗೆ ಕುರಿತ ಚಟುವಟಿಕೆಗಳನ್ನು ಸಮರ್ಪಕ ರೀತಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ತನ್ವೀರಾ ಬಷಿರುದ್ದೀನ್ ಹೇಳಿದರು.ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.ಕೃಷಿ ಹಾಗೂ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಜಾಫರ್ ಅಲಿ ಪಟೇಲ್ ಮಾತನಾಡಿ, ಅತ್ಯಂತ ಹಿಂದುಳಿದ ಗ್ರಾಮಾಂತರ ಪ್ರದೇಶದಲ್ಲಿ ಬಾಲ ಕಾರ್ಮಿಕ ಶಾಲೆಗಳನ್ನು ಆರಂಭಿಸಬೇಕು ಎಂದು ಹೇಳಿದರು.ಯುವಜನ ಸೇವಾ ಇಲಾಖೆ ವತಿಯಿಂದ ಯುವಕರಿಗೆ ಹೊಸ ಉದ್ಯೋಗ ಅವಕಾಶಗಳು, ಪ್ರತಿಭಾ ವಿಕಾಸಕ್ಕೆ ಇರುವ ಹೊಸ ರೀತಿಯ ಅವಕಾಶಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಬೇಕು. ಕಾರ್ಮಿಕ ಇಲಾಖೆಯಿಂದ ಸ್ವಾಸ್ಥ್ಯ ಭೀಮಾ ಯೋಜನೆಯಡಿ 3,500 ಫಲಾನುಭವಿಗಳಿಗೆ ಕಾರ್ಡ್ ವಿತರಿಸಲಾಗಿದೆ.

 

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ವತಿಯಿಂದ ಆನ್‌ಲೈನ್‌ನಲ್ಲಿ ಪಡಿತರ ಚೀಟಿಗಾಗಿ ನೋಂದಾಯಿಸಲು ಗ್ರಾಮ ಪಂಚಾಯಿತಿಗೆ ಜನಸಾಮಾನ್ಯರು ಬಂದಾಗ ಸೂಕ್ತ ರೀತಿ ಸ್ಪಂದಿಸಬೇಕು ಎಂದು ಹೇಳಿದರು.ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾದ ಕೊಳವೆ ಬಾವಿಗೆ ಜೆಸ್ಕಾಂ ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯಿತಿಯಲ್ಲಿ ನೋಂದಾಯಿಸಿಕೊಂಡಿರುವ ಕೂಲಿ ಕಾರ್ಮಿಕರಿಗೆ ಕೆಲಸ ಸಮರ್ಪಕ ರೀತಿ ನೀಡಬೇಕು ಎಂದು ತಿಳಿಸಿದರು.ವಿವಿಧ ಅಭಿವೃದ್ಧಿ ಕಾಮಗಾರಿ ಕಲ್ಪಿಸಿರುವ ಅನುದಾನವನ್ನು ನಿರ್ದಿಷ್ಟಪಡಿಸಿದ ಅವಧಿಯಲ್ಲಿಯೇ ಖರ್ಚು ಮಾಡಬೇಕು. ಮುಂಬರುವ ದಿನಗಳಲ್ಲಿ ಮಾಸಿಕ ಕೆಡಿಪಿ ಸಭೆ ಕುರಿತ ವರದಿಯನ್ನು 25ನೇ ತಾರೀಖಿನೊಳಗೆ ಕಳುಹಿಸಬೇಕು ಎಂದು ಸೂಚಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನೋಜಕುಮಾರ ಜೈನ್, ಸಾಮಾಜಿಕ ಹಾಗೂ ನ್ಯಾಯ ಸಮಿತಿ ಅಧ್ಯಕ್ಷೆ ಪದ್ಮಾವತಿ ಈರನಗೌಡ, ಉಪಕಾರ್ಯದರ್ಶಿ ಯುಸೂಫ್ ವೇದಿಕೆಯಲ್ಲಿದ್ದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಯೋಜನಾಧಿಕಾರಿ ರೋಣಿ ಸ್ವಾಗತಿಸಿದರು.

Post Comments (+)