ಭಾನುವಾರ, ಜೂನ್ 13, 2021
20 °C

ಕುಡಿವ ನೀರು ಪೂರೈಕೆಗೆ ಒತ್ತಾಯಿಸಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮಗ್ರ ಕುಡಿಯುವ ನೀರು ಪೂರೈಕೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಹಾಲಕ್ಷ್ಮಿ ಲೇಔಟ್ ನಿವಾಸಿಗಳು ನಗರದ ಆನಂದ್ ರಾವ್ ವೃತ್ತ ಸಮೀಪದ ಗಾಂಧಿ ಪ್ರತಿಮೆ ಬಳಿ ಗುರುವಾರ ಧರಣಿ ನಡೆಸಿದರು.ಶಾಸಕ ನೆ.ಲ.ನರೇಂದ್ರಬಾಬು ಮಾತನಾಡಿ `ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ಸುತ್ತಮುತ್ತಲ ಪ್ರದೇಶದ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ನರಳುತ್ತಿದ್ದಾರೆ. ನೀರು ಪೂರೈಕೆಗಾಗಿ ಹಲವು ಬಾರಿ ಹೋರಾಟ ನಡೆಸಿದ್ದರೂ ಸರ್ಕಾರ ಈ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಪರಿಗಣಿಸಿಲ್ಲ. ಬೇಸಿಗೆ ಆರಂಭವಾಗುವ ಮುನ್ನವೇ ಈ ರೀತಿ ನೀರಿನ ಹಾಹಾಕಾರ ಉಂಟಾದರೆ ಮುಂದಿನ ದಿನಗಳಲ್ಲಿ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ~ ಎಂದು ಪ್ರಶ್ನಿಸಿದರು.ಹೇಮಾವತಿ ನದಿ ಸೇರಿದಂತೆ ಇತರೆ ಜಲಾಶಯಗಳಿಂದ ಕುಡಿಯುವ ನೀರು ಪೂರೈಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಅಲ್ಲಿಯವರೆಗೆ ಪ್ರತಿ ವಾರ್ಡ್‌ಗೂ ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.  ಪ್ರತಿ ಕೊಡ ನೀರಿಗೆ ಐದರಿಂದ ಹತ್ತು ರೂಪಾಯಿ ಹಣ ಪಾವತಿ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾರ್ಡ್ ನಿವಾಸಿಗಳು ಖಾಲಿ ಕೊಡಗಳನ್ನು ಹಿಡಿದು ಸರ್ಕಾರ ಹಾಗೂ ಜಲಮಂಡಳಿ ವಿರುದ್ಧ ಘೋಷಣೆ ಕೂಗಿದರು.ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷ ಗೌರವ್‌ಗುಪ್ತ, ಇದರ ಬಗ್ಗೆ ಶೀಘ್ರವೇ ಸಭೆ ಕರೆದು ನೀರಿನ ಸಮಸ್ಯೆಯನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.  ಕಾಂಗ್ರೆಸ್ ಮುಖಂಡ ಟಿ.ಆರ್. ಶ್ರೀನಿವಾಸ್, ರಾಜ್ಯ ಯುವ ಕಾಂಗ್ರೆಸ್‌ನ ಅಧ್ಯಕ್ಷ ಎಸ್.ಮನೋಹರ್, ಪ್ರಮೋದ್ ಶಂಕರ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.