ಭಾನುವಾರ, ಸೆಪ್ಟೆಂಬರ್ 27, 2020
26 °C

ಕುವೆಂಪು ವಿವಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಕಾಲೇಜು ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುವೆಂಪು ವಿವಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಕಾಲೇಜು ಬಂದ್

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಉತ್ತರ ಪತ್ರಿಕೆ ನಕಲು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಎನ್‌ಎಸ್‌ಯುಐ ಸಂಘಟನೆ ಸೋಮವಾರ ಕರೆ ನೀಡಿದ್ದ ನಗರದ ಕಾಲೇಜುಗಳ ಬಂದ್ ಸಂಪೂರ್ಣ ಯಶಸ್ವಿಯಾಯಿತು.ಬಹುತೇಕ ಕಾಲೇಜುಗಳು ಮೊದಲೇ ರಜೆ ಘೋಷಿಸಿದ್ದವು. ಇನ್ನೂ ಕೆಲವು ಎಂದಿನಂತೆ ತರಗತಿ ನಡೆಸುತ್ತಿದ್ದು, ವಿಷಯ ತಿಳಿದ ಸಂಘಟನೆ ಕಾರ್ಯಕರ್ತರು, ಕಾಲೇಜುಗಳಿಗೆ ತೆರಳಿ, ಬಾಗಿಲು ಮುಚ್ಚಿಸಿದ ಪ್ರಸಂಗವೂ ನಡೆಯಿತು. ಪ್ರತಿಭಟನೆಯಲ್ಲಿ 10 ಪದವಿ ಕಾಲೇಜು, 18 ಪಿಯು ಹಾಗೂ 3 ಡಿಪ್ಲೊಮಾ ಕಾಲೇಜುಗಳು ಬಂದ್‌ನಲ್ಲಿ ಪಾಲ್ಗೊಂಡಿದ್ದವು.ನಂತರ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಬೈಕ್‌ರ‌್ಯಾಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಬದಲಾವಣೆ ಮಾಡುವುದು, ವಿವಿಧ ಪದವಿಗಳ ನಕಲಿ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ಸೃಷ್ಟಿಸಿಕೊಟ್ಟಿರುವುದು ನಿಜಕ್ಕೂ ಆತಂಕಕಾರಿಯಾದ ಸಂಗತಿ. ಇದರಲ್ಲಿ ಕುವೆಂಪು ವಿವಿಯ ಸಿಬ್ಬಂದಿಗಳೇ ಭಾಗಿಯಾಗಿದ್ದಾರೆ. ಇದು ವಿವಿಯ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಈ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಪೊಲೀಸ್ ತನಿಖೆಯಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣವನ್ನು ಕೂಡಲೇ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.ಈ ಹಗರಣಕ್ಕೆ ಸಂಬಂಧಿಸಿದಂತೆ ಉಪಕುಲಪತಿ ಪ್ರೊ.ಎಸ್.ಎ. ಬಾರಿ ಅವರು ಸತ್ಯ ಶೋಧನಾ ಸಮಿತಿ ರಚಿಸಿದ್ದಾರೆ. ಇದಕ್ಕೆ ಆರೋಪವೊಂದರಲ್ಲಿ ಸಿಲುಕಿದ ಪ್ರೊ.ಸದಾನಂದ ಅವರನ್ನು ನೇಮಿಸಲಾಗಿದೆ ಎಂದು ದೂರಿದರು.ಕುವೆಂಪು ವಿಶ್ವವಿದ್ಯಾಲಯದ ಪ್ರಕರಣ ಕುರಿತು ರಾಜ್ಯ ಸರ್ಕಾರ ತನ್ನ ನಿಲುವು  ಸ್ಪಷ್ಟಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನೆಯ ನೇತೃತ್ವವನ್ನು ಶಿವಮೊಗ್ಗ- ಚಿಕ್ಕಮಗಳೂರು ಎನ್‌ಎಸ್‌ಯುಐ ಅಧ್ಯಕ್ಷ ಸಿ.ಜಿ. ಮಧುಸೂಧನ್, ಮಾಜಿ ಅಧ್ಯಕ್ಷ ದೇವೇಂದ್ರಪ್ಪ, ಶಿವಮೊಗ್ಗ ನಗರ ಘಟಕದ ಅಧ್ಯಕ್ಷ ಚೇತನ್, ಪದಾಧಿಕಾರಿಗಳಾದ ಮಧುಕುಮಾರ್, ಶ್ರೀಜಿತ್  ವಹಿಸಿದ್ದರು.

  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.