ಕುಸ್ಮಾ ವಿರುದ್ಧದ ಪಿಐಎಲ್ ವಜಾ

7

ಕುಸ್ಮಾ ವಿರುದ್ಧದ ಪಿಐಎಲ್ ವಜಾ

Published:
Updated:

ಬೆಂಗಳೂರು: `ಕರ್ನಾಟಕ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕುಸ್ಮಾ), ಶಿಕ್ಷಣ ಹಕ್ಕು ಕಾಯ್ದೆಯ ಕೆಲವು ಅಂಶಗಳನ್ನು ವಿರೋಧಿಸಿ, ತನ್ನ ವ್ಯಾಪ್ತಿಯಲ್ಲಿ ಬರುವ ಶಾಲೆಗಳನ್ನು ಕಾನೂನು ಬಾಹಿರವಾಗಿ ಬಂದ್ ಮಾಡಿತ್ತು;

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿತ್ತು. ಈ ಹಿನ್ನೆಲೆಯಲ್ಲಿ ಅದರ ವಿರುದ್ಧ ಕ್ರಮ ಜರುಗಿಸಬೇಕು~ ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

`ಕುಸ್ಮಾ~ ವ್ಯಾಪ್ತಿಯಲ್ಲಿ ಬರುವ ಶಾಲೆಗಳು ಈಗಾಗಲೇ ಆರಂಭವಾಗಿವೆ.

ಪಠ್ಯ, ಪಠ್ಯೇತರ ಚಟುವಟಿಕೆಗಳು ನಡೆಯುತ್ತಿವೆ. ಹಾಗಾಗಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಅರ್ಜಿ ವಜಾ ಮಾಡಿತು. ವಕೀಲ ಎಸ್. ವಾಸುದೇವ ಅವರು ಈ ಅರ್ಜಿ ಸಲ್ಲಿಸಿದ್ದರು.ವೇತನ ಪಾವತಿಗೆ ಆದೇಶ: ಚಿತ್ರದುರ್ಗದ ಖಾಸಗಿ ಶಾಲೆಯೊಂದರ ಶಿಕ್ಷಕಿ ಶಾಮಲತಾ ಅವರಿಗೆ 2001ರಿಂದ ವೇತನ ಪಾವತಿ ಮಾಡದ ಶಿಕ್ಷಣ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ವಾರ್ಷಿಕ ಶೇಕಡ 6ರ ಬಡ್ಡಿ ಸೇರಿಸಿ ವೇತನ ನೀಡಲು ಆದೇಶಿಸಿದೆ.ನಾಲ್ಕು ವಾರಗಳಲ್ಲಿ ವೇತನದ ಬಾಕಿ ಮೊತ್ತವನ್ನು ಬಡ್ಡಿಸಹಿತ ಪಾವತಿಸಬೇಕು. ವಿಳಂಬವಾದರೆ ಶೇ 8ರ ಬಡ್ಡಿ ಕೊಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಸೂಚಿಸಿತು.ವಾಪಸ್ ಪಡೆಯಿರಿ: ಬಹುಜನ ಸಮಾಜ ಪಕ್ಷದ ಮುಖಂಡ ಮಾರಸಂದ್ರ ಮುನಿಯಪ್ಪ ಅವರಿಗೆ ನೀಡಿರುವ ಪೋಲೀಸ್ ಭದ್ರತೆಯನ್ನು 24 ಗಂಟೆಗಳಲ್ಲಿ ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.ಮುನಿಯಪ್ಪ ಅವರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳ ಕುರಿತು ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠ ಆದೇಶಿಸಿದೆ.ವಿಚಾರಣೆ ಮುಂದೂಡಿಕೆ: ಬೆನ್ನಿಗಾನಹಳ್ಳಿಯಲ್ಲಿ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಅಕ್ರಮವಾಗಿ ಕೈಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಅವರಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ಹೈಕೋರ್ಟ್ ವಿನಾಯಿತಿ ನೀಡಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣದ ರದ್ದತಿಗೆ ಕೋರಿ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನವೆಂಬರ್ 5ರಂದು ನಡೆಸುವುದಾಗಿ ನ್ಯಾಯಮೂರ್ತಿ ಡಿ.ಬಿ. ಭೋಸ್ಲೆ ಹೇಳಿದ್ದಾರೆ.ಪಿಐಎಲ್ ವಜಾ: ರಾಜ್ಯ ಬರ ಎದುರಿಸುತ್ತಿರುವ ಸಂದರ್ಭದಲ್ಲಿ ಶಾಸಕರು ವಿದೇಶ ಪ್ರವಾಸ ಕೈಗೊಂಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

`ಶಾಸಕರು ಕಾನೂನು ಉಲ್ಲಂಘಿಸಿದರೆ ನ್ಯಾಯಾಲಯ ಮಧ್ಯಪ್ರವೇಶ ಮಾಡಬಹುದು.

ಅವರ ಹಕ್ಕುಗಳ ವಿಷಯದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ~ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠ ಅರ್ಜಿಯನ್ನು ತಿರಸ್ಕರಿಸಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry