ಮಂಗಳವಾರ, ಏಪ್ರಿಲ್ 13, 2021
32 °C

ಕೃಷ್ಣ ಮನೆ ಮುಂದೆ ರೈತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೇಷ್ಮೆ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ರೇಷ್ಮೆ ಬೆಳೆಗಾರರು ಸುಂಕ ರಹಿತ ರೇಷ್ಮೆ ಆಮದು ವಿರೋಧಿ ಅಖಿಲ ಭಾರತ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದ ಸದಾಶಿವನಗರದಲ್ಲಿರುವ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರ ನಿವಾಸದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.‘ಮನವಿ ಪತ್ರ ಸ್ವೀಕರಿಸಿದ ಕೃಷ್ಣ ಅವರು ರೇಷ್ಮೆ ಬೆಳೆಗಾರರ ಸಮಸ್ಯೆಗಳನ್ನು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ.

 

ಬೇಡಿಕೆ ಈಡೇರದಿದ್ದರೆ ರೇಷ್ಮೆ ಬೆಳೆಯುವ ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತಿತರ ಜಿಲ್ಲೆಗಳಲ್ಲಿ ಬಂದ್ ಮಾಡಬೇಕಾಗುತ್ತದೆ’ ಎಂದು ರಾಜ್ಯ ಪ್ರಾಂತ ರೈತ ಸಂಘದ ಸಂಘಟನಾ ಸಂಚಾಲಕ ಜಿ.ಸಿ ಬಯ್ಯಾರೆಡ್ಡಿ ಹೇಳಿದರು. ‘ಬೆಲೆ ಕುಸಿತದಿಂದ ರೇಷ್ಮೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಶೇ 31ರಷ್ಟಿದ್ದ ರೇಷ್ಮೆ ಮೇಲಿನ ಆಮದು ಸುಂಕವನ್ನು ಶೇ 5ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಆಮದು ಪ್ರಮಾಣ ಹೆಚ್ಚಾಗಿ ಇಲ್ಲಿನ ರೇಷ್ಮೆಗೆ ಬೆಲೆ ಇಲ್ಲದಂತಾಗಿದೆ’ ಎಂದು ಅವರು ದೂರಿದರು.‘ಎರಡೂವರೆ ಸಾವಿರ ಮೆಟ್ರಿಕ್ ಟನ್ ರೇಷ್ಮೆಯನ್ನು ಸುಂಕ ರಹಿತವಾಗಿ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗೆ ಮಾಡಿದರೆ ರಾಜ್ಯದ ರೇಷ್ಮೆ ಬೆಳೆಗಾರರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಈ ನಿರ್ಧಾರವನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು’ ಎಂದು ಅವರು ಆಗ್ರಹಿಸಿದರು. ‘ಆತ್ಮಹತ್ಯೆ ಮಾಡಿಕೊಂಡ ಮಳವಳ್ಳಿಯ ರೇಷ್ಮೆ ಬೆಳೆಗಾರ ಸ್ವಾಮಿಗೌಡ ಅವರ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಅವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ನೋಡಿಕೊಳ್ಳಬೇಕು’ ಎಂದು ಬಯ್ಯಾರೆಡ್ಡಿ ಒತ್ತಾಯಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.