ಶುಕ್ರವಾರ, ಏಪ್ರಿಲ್ 23, 2021
22 °C

ಕೇಂದ್ರಸ್ಥಾನ ಬಿಡುವಂತಿಲ್ಲ: ಡಿಸಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಜಿಲ್ಲೆಯ ಸರ್ಕಾರಿ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನವನ್ನು ಬಿಡುವುದಕ್ಕೆ ಮುಂಚೆ ಜಿಲ್ಲಾಧಿಕಾರಿಗಳ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಲಿಖಿತ ರೂಪದಲ್ಲಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ಸೂಚನೆ ನೀಡಿದ್ದಾರೆ.ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ, ಸರ್ಕಾರದ ಸೌಲಭ್ಯಗಳು ಹಾಗೂ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲು, ಕಚೇರಿಯ ವಿವಿಧ ವಿಷಯಗಳ ಕಡತಗಳನ್ನು ವಿಳಂಬವಿಲ್ಲದೇ ವಿಲೇವಾರಿ ಮಾಡಲು, ಸರ್ಕಾರದ ನಿರ್ದೇಶನಗಳನ್ನು ಅನುಸರಿಸುವ ಉದ್ದೇಶದಿಂದ ಇನ್ನು ಮುಂದೆ ಜಿಲ್ಲೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕರ್ತವ್ಯದ ದಿನಗಳೂ ಸೇರಿದಂತೆ ಸಾರ್ವತ್ರಿಕ ರಜಾ ದಿನಗಳಲ್ಲೂ ಕೇಂದ್ರ ಸ್ಥಾನ ಬಿಡುವ ಮುಂಚೆ ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಲಿಖಿತ ರೂಪದಲ್ಲಿ ಪಡೆಯಬೇಕು.

 

ಅದರಂತೆ ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಅಧೀನದ ತಾಲ್ಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೂ ಕೂಡ ಕೇಂದ್ರ ಸ್ಥಾನ ಬಿಡುವ ಮುಂಚೆ ಕಡ್ಡಾಯವಾಗಿ ಪೂರ್ವಾನುಮತಿ ಪಡೆದು ಕೇಂದ್ರ ಸ್ಥಾನ ಬಿಡಲು ನಿರ್ದೇಶನ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಹಳಷ್ಟು ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸಿಸದೇ ಗುಲ್ಬರ್ಗ ಹಾಗೂ ರಾಯಚೂರು

ಜಿಲ್ಲೆಗಳಿಂದ ನಿತ್ಯ ಬಂದು ಹೋಗುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ.ಮೇಲಾಧಿಕಾರಿಗಳ ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡುತ್ತಿರುವುದು ಗಮನಕ್ಕೆ ಬಂದಿದೆ. ಯಾದಗಿರಿ ಜಿಲ್ಲಲೆ ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ರೂಪಿಸುವ ಗುರುತರ ಜವಾಬ್ದಾರಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.ಜಿಲ್ಲೆ ಅಸ್ತಿತ್ವಕ್ಕೆ ಬಂದು ಮೂರು ವರ್ಷಗಳು ಗತಿಸುತ್ತಿರುವ ಸಂದರ್ಭದಲ್ಲಿ ಸರ್ಕಾರದ ನಿರೀಕ್ಷೆಗೆ ಅನುಗುಣವಾಗಿ ಅಭಿವೃದ್ಧಿ ಕೆಲಸಗಳು  ಆಗದೇ ಇರುವುದು, ಸರ್ಕಾರದ ಅನೇಕ ಯೋಜನೆಗಳ ಲಾಭ ಜನಸಾಮಾನ್ಯರಿಗೆ ಸರಿಯಾಗಿ ತಲುಪದೇ ಇರುವುದಕ್ಕೆ ಅಧಿಕಾರಿಗಳು ಕರ್ತವ್ಯದಲ್ಲಿ ಕಾಳಜಿ ವಹಿಸದೇ,  ಕೇಂದ್ರಸ್ಥಾನದಲ್ಲಿ ವಾಸ ಮಾಡದೇ ಇರುವುದು ಒಂದು ಪ್ರಮುಖ ಕಾರಣವಾಗಿದೆ.

 

ಅಧಿಕಾರಿಗಳ ಈ ವರ್ತನೆಯಿಂದ ಸಿಬ್ಬಂದಿಗಳೂ ನಿತ್ಯ ಕೇಂದ್ರಸ್ಥಾನ ಬಿಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಹೀಗಾಗಿ ಜಿಲ್ಲೆಯ ಅಭಿವೃದ್ಧಿ ಕುಂಠಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಾಗ ಇಲಾಖಾ ಮುಖ್ಯಸ್ಥರು, ಆಡಳಿತಾತ್ಮಕ ಮುಖ್ಯಸ್ಥರ ಪೂರ್ವನುಮತಿ ಇಲ್ಲದೇ ತೆರಳುವುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸರ್ಕಾರದ ಸುತ್ತೋಲೆಯಂತೆ ಸೂಕ್ತ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗುತ್ತಿದ್ದು, ಸೂಚನೆ ಉಲ್ಲಂಘಿಸಿ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಟ್ಟಿರುವ ಹಾಗೂ ಕೇಂದ್ರ ಸ್ಥಾನದಲ್ಲಿ ವಾಸಿಸದೇ ಇರುವ ಪ್ರಕರಣಗಳು ಕಂಡು ಬಂದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.