ಗುರುವಾರ , ಮೇ 19, 2022
24 °C

ಕೇಂದ್ರ ಗೃಹ ಸಚಿವರ ಪ್ರತಿಕೃತಿ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಕ್ರಮವನ್ನು ಖಂಡಿಸಿ ಜಯ ಕರ್ನಾಟಕ ಕಾರ್ಯಕರ್ತರು ನಗರದಲ್ಲಿ ಗುರುವಾರ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.ನಗರದ ಹೃದಯ ಭಾಗದಲ್ಲಿರುವ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಸಂಘಟನೆಯ ಜಿಲ್ಲಾ ಘಟಕದ ಕಾರ್ಯಕರ್ತರು, ಕೆಲ ಕಾಲ ರಸ್ತೆ ತಡೆ ನಡೆಸಿದರು.ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಕವಲೂರು, 371ನೇ ವಿಧಿಗೆ ತಿದ್ದುಪಡಿ ತರುವುದು ಸಾಧುವಲ್ಲ ಎಂಬಂತಹ ನಿಲುವು ತಳೆಯುವ ಮೂಲಕ ಕೇಂದ್ರ ಸರ್ಕಾರ ಸತತವಾಗಿ ಹೈದರಾಬಾದ್ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.ಸಂವಿಧಾನ ರಚನಾ ಸಮಿತಿ 1956ರಲ್ಲಿಯೇ ಈ ಭಾಗದ ಅಭಿವೃದ್ಧಿ ಬಗ್ಗೆ ಪ್ರಸ್ತಾಪಿಸಿತ್ತಲ್ಲದೇ, 371ನೇ ವಿಧಿಗೆ ತಿದ್ದುಪಡಿ ತರುವ ಮೂಲಕ ಅಭಿವೃದ್ಧಿ ಸಾಧಿಸಬೇಕು ಎಂಬ ನಿರ್ಣಯ ಕೈಗೊಂಡಿತ್ತು. ಆದರೆ, ಈಗಿನ ಯು.ಪಿ.ಎ. ಸರ್ಕಾರ ಸಹ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಎತ್ತಿರುವ ಕೂಗಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ಈ ನಿಲುವನ್ನು ಬದಲಿಸಿ, 371ನೇ ವಿಧಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದೂ ಅವರು ಎಚ್ಚರಿಸಿದರು.ಸಂಘಟನೆಯ ಆಟೋ ಘಟಕದ ಅಧ್ಯಕ್ಷ ಈಶಪ್ಪ ಸಾದರ, ಮಹಿಳಾ ಘಟಕದ ನಿರ್ಮಲಾ ಕ್ವಾಟಿ, ನೀಲಮ್ಮ ಯಲಬುರ್ಗಿ, ವಿಜಯಕುಮಾರ ಲೇಬಗೇರಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.