ಕ್ಷೇತ್ರದ ಜನರ ಕ್ಷಮೆ ಕೋರಿದ ಪರಮೇಶ್ವರ್

7

ಕ್ಷೇತ್ರದ ಜನರ ಕ್ಷಮೆ ಕೋರಿದ ಪರಮೇಶ್ವರ್

Published:
Updated:

ತೋವಿನಕೆರೆ: ಕ್ಷೇತ್ರದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಸಾಧ್ಯವಾಗಿಲ್ಲ. ಇದಕ್ಕಾಗಿ ಬಹಿರಂಗವಾಗಿ ಕ್ಷೇತ್ರದ ಜನತೆಯ ಕ್ಷಮೆ ಕೋರುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ, ಶಾಸಕ ಡಾ.ಜಿ.ಪರಮೇಶ್ವರ್ ಶುಕ್ರವಾರ ಹೇಳಿದರು.ಗ್ರಾಮದಲ್ಲಿ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಮೋಟರ್ ಪಂಪು, ಸ್ಟಾರ್ಟರ್, ಪೈಪ್‌ಗಳನ್ನು ವಿತರಿಸುವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಅಸಹಕಾರದಿಂದ ಕ್ಷೇತ್ರದ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.ತೋವಿನಕೆರೆ- ಊರುಕೆರೆ- ತುಮಕೂರು, ತೋವಿನಕೆರೆ- ಅರಕೆರೆ- ತುಮಕೂರು, ಕೊರಟಗೆರೆ- ತುಮಕೂರು ರಸ್ತೆ ಅಭಿವೃದ್ಧಿ ಪಡಿಸಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ಅವರಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸಲಿಲ್ಲ.ಈ ನಿಟ್ಟಿನಲ್ಲಿ ನಡೆಸಿದ ಹೋರಾಟ ನಿರರ್ಥಕವಾಯಿತು. ಇದೀಗ ಮುಖ್ಯಮಂತ್ರಿ ಗಮನಕ್ಕೆ ಸಮಸ್ಯೆ ತಂದಿದ್ದು, ಮುಂಬರುವ ಬಜೆಟ್‌ನಲ್ಲಿ ಹಣ ನಿಡುವ ಭರವಸೆ ನೀಡಿದ್ದಾರೆ ಎಂದರು.ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯ ಮನಸಿಗೆ ಸಮಾಧಾನ ನೀಡಿಲ್ಲ. ಇದನ್ನು ಮುಕ್ತವಾಗಿ ಒಪ್ಪಿಕೊಳ್ಳುತ್ತೇನೆ. ಮುಂದೆ ಈಗಾಗದಂತೆ ಎಚ್ಚರ ವಹಿಸುತ್ತೇನೆ ಎಂದ ಪರಮೇಶ್ವರ್, ಶಾಶ್ವತ ನೀರಾವರಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದರು.ಕ್ಷೇತ್ರಕ್ಕೆ 8 ಸಾವಿರ ಮನೆ ಮಂಜೂರಾಗಿದೆ. 16 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿನ ಬೇಡಿಕೆ ಗಮನಿಸಿ ವಸತಿ ಸಚಿವ ವಿ.ಸೋಮಣ್ಣ ಇನ್ನೂ ಆರು ಸಾವಿರ ಮನೆ ನೀಡುವ ಭರವಸೆ ನೀಡಿದ್ದಾರೆ. ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಮುನ್ನೂರಕ್ಕೂ ಅಧಿಕ ಮನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಸದಸ್ಯ ಟಿ.ಡಿ.ಪ್ರಸನ್ನಕುಮಾರ್, ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಆರ್.ಲೋಕೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ನಾಗರಾಜು ಮಾತನಾಡಿದರು.ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮರಿಯಪ್ಪ, ಉಪಾಧ್ಯಕ್ಷೆ ಚಿನ್ನಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ರವಿಕುಮಾರ್, ಜಿ.ಎಲ್.ಹನುಮಂತರಾಯಪ್ಪ, ಬಸವರಾಜು, ತಾಲ್ಲೂಕು ಪಂಚಾಯಿತಿ ನಿರ್ವಹಣಾಧಿಕಾರಿ ಗೋಪಾಲ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಲಿಂಗೇಗೌಡ, ಚಿಕ್ಕರಸನಹಳ್ಳಿ ರಾಮಚಂದ್ರೇಗೌಡ, ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾರಪ್ಪ, ಜಿಲ್ಲಾ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಚಂದ್ರಶೇಖರಗೌಡ, ಬ್ರಹ್ಮಸಂದ್ರದ ಪುಟ್ಟರಾಜು ಹಾಗೂ ಇತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry