ಸೋಮವಾರ, ಜುಲೈ 26, 2021
21 °C

ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಅಗತ್ಯ: ಸಿದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಬಾರದು ಎಂದು ಸಂವಿಧಾನದಲ್ಲಿ ಎಲ್ಲಿಯೂ ಹೇಳಿಲ್ಲ. ಅಗತ್ಯವಾದರೆ ಸಂವಿಧಾನಕ್ಕೆ ತಿದ್ದುಪಡಿ ತಂದಾದರೂ ಖಾಸಗಿ ರಂಗದಲ್ಲಿ ದಲಿತರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಬೇಕು ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಪಾದಿಸಿದರು.ನಗರದ ಮಾಗಡಿ ಮುಖ್ಯರಸ್ತೆಯಲ್ಲಿರುವ ಗೊಲ್ಲರಹಟ್ಟಿಯಲ್ಲಿ ಕೆಪಿಸಿಸಿ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಉತ್ತಮ ಅಂಶಗಳನ್ನು ಸ್ವಾಗತಿಸೋಣ. ಆದರೆ ಅವುಗಳಲ್ಲಿನ ಕಾರ್ಮಿಕ ವಿರೋಧಿ ನೀತಿಗಳ ಬಗ್ಗೆ ಹೋರಾಟ ನಡೆಸಬೇಕಾದ ಅಗತ್ಯವಿದೆ’ ಎಂದರು.ಖಾಸಗೀಕರಣದ ಹೆಸರಿನಲ್ಲಿ ಸರ್ಕಾರಿ ಉದ್ದಿಮೆಗಳು ಬಂಡವಾಳಶಾಹಿಗಳ ಕೈಸೇರುತ್ತಿವೆ. ಖಾಸಗಿ ಉದ್ದಿಮೆಗಳಲ್ಲಿ ಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುವುದರಿಂದ ಅವರ ಕೆಲಸಕ್ಕೆ ಭದ್ರತೆಯೇ ಇಲ್ಲವಾಗಿದೆ ಎಂದು ವಿಷಾದಿಸಿದರು.ಆಡಳಿತಾರೂಢ ಬಿಜೆಪಿ ಸರ್ಕಾರದ ಮೇಲೆ ಆರೋಪಗಳ ಮಳೆ ಸುರಿಸಿದ ಸಿದ್ದರಾಮಯ್ಯ, ಬಿಜೆಪಿಗೆ ಸಾಮಾಜಿಕ ನ್ಯಾಯ ಅಥವಾ ಕಾರ್ಮಿಕರ ಕಲ್ಯಾಣದ ಬಗ್ಗೆ ಕಾಳಜಿ ಇಲ್ಲ. ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಬಿಜೆಪಿ ಎಂದೂ ಹೋರಾಟ ನಡೆಸಿಲ್ಲ ಎಂದರು.ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ‘ಯುಪಿಎ ಸರ್ಕಾರ ಆರಂಭಿಸಿರುವ ಕಾರ್ಮಿಕಪರ ಯೋಜನೆಗಳ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ಮಾಹಿತಿ ನೀಡಬೇಕು’ ಎಂದು ಕರೆ ನೀಡಿದರು.ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಎಂ.ವಿ. ರಾಜಶೇಖರನ್, ವಿಧಾನ ಪರಿಷತ್ ಸದಸ್ಯ ವಿ.ಆರ್. ಸುದರ್ಶನ್, ಶಾಸಕ ದಿನೇಶ್ ಗುಂಡೂರಾವ್, ಮುಖಂಡರಾದ ವಿ.ಎಸ್. ಉಗ್ರಪ್ಪ, ಬಿ.ಎಲ್. ಶಂಕರ್, ಎಸ್.ಟಿ. ಸೋಮಶೇಖರ್ ಮತ್ತಿತರರು  ಉಪಸ್ಥಿತರಿದ್ದರು.ಕೆಲವು ಸ್ಥಳೀಯ ಬಿಜೆಪಿ, ಜೆಡಿಎಸ್ ಮುಖಂಡರು ಇದೇ ವೇಳೆ ಕಾಂಗ್ರೆಸ್  ಸೇರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.