ಬುಧವಾರ, ಜನವರಿ 22, 2020
23 °C

ಗ್ರಾಮಸಭೆ: ಮಕ್ಕಳ ಪಾಲ್ಗೊಳ್ಳುವಿಕೆ ಹೆಚ್ಚಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ರೂಪಿಸುವ ಶಿಕ್ಷಣ ನೀಡಬೇಕು. ಮಕ್ಕಳನ್ನು ಗ್ರಾಮಸಭೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು~ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಇಲ್ಲಿನ `ಶಿಕ್ಷಕರ ಭವನ~ದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಸದಸ್ಯರು ಹಾಗೂ ಅಧ್ಯಕ್ಷರಿಗೆ ಶುಕ್ರವಾರ ಏರ್ಪಡಿಸಲಾಗಿದ್ದ ಮಕ್ಕಳ ಶಿಕ್ಷಣ ಹಕ್ಕುಗಳ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಶಾಲೆಗಳ ಶಿಕ್ಷಕರ ಜೊತೆ ಇಲಾಖೆಯ ಅಧಿಕಾರಿಗಳು ಮಾತುಕತೆ ನಡೆಸಬೇಕು. ಗ್ರಾಮೀಣ ಪ್ರದೇಶಗಳ ಕೆಲವು ಶಾಲೆಗಳು ಶೇಕಡ 50ಕ್ಕಿಂತ ಕಡಿಮೆ ಫಲಿತಾಂಶ ಪಡೆಯುತ್ತಿರುವುದು ಸರ್ಕಾರಕ್ಕೆ ಆತಂಕ ತರುವ ವಿಚಾರ ಎಂದು ಹೇಳಿದರು.`ರಾಜ್ಯದಲ್ಲಿ ಅಂದಾಜು 1.10 ಕೋಟಿ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯದಲ್ಲಿ ಯಾವುದೇ ಕೊರತೆ ಆಗಿಲ್ಲ~ ಎಂದ ಅವರು, `ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಲು ಇಂಗ್ಲಿಷ್ ಮಾಧ್ಯಮ ಶಾಲೆಗಳು ಮಾತ್ರ ಕಾರಣವಲ್ಲ. ಗ್ರಾಮೀಣ ಪ್ರದೇಶದ ಜನಸಂಖ್ಯಾ ಬೆಳವಣಿಗೆಯಲ್ಲಿ ಕಂಡುಬಂದ ಕುಸಿತವೂ ಕಾರಣ~ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.ವಿಕೇಂದ್ರೀಕರಣ ಪ್ರಕ್ರಿಯೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಮಹತ್ವದ ಜವಾಬ್ದಾರಿ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಇಟ್ಟಿರುವ ನಂಬಿಕೆಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಪ್ರತಿಕ್ರಿಯಿಸಿ (+)