ಗುರುವಾರ , ಮೇ 19, 2022
22 °C

ಗ್ರಾಮೀಣ ರಸ್ತೆ ನಿರ್ಮಾಣ: ಪ್ರಸ್ತಾವ ಸಲ್ಲಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 500ಕ್ಕಿಂತ ಕಡಿಮೆ 250ಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಗ್ರಾಮಗಳಿಗೆ ಸಂಪರ್ಕ ರಸ್ತೆ ನಿರ್ಮಿಸಲು ಪ್ರಸ್ತಾವಗಳನ್ನು ಒಂದು ವಾರದೊಳಗೆ ಸಲ್ಲಿಸುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಸುಬ್ರಾಯ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, `ಪಿಎಂಜಿಎಸ್‌ವೈ ಯೋಜನೆಯಡಿ ಈಶಾನ್ಯ ರಾಜ್ಯಗಳಲ್ಲಿರುವಂತೆ ಮಾರ್ಗಸೂಚಿ ಬದಲಾವಣೆ ಕುರಿತಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ 500ಕ್ಕಿಂತ ಕಡಿಮೆ ಜನಸಂಖ್ಯೆಯಿರುವ ಗ್ರಾಮಗಳಿಗೂ ರಸ್ತೆ ಸಂಪರ್ಕ ಕಲ್ಪಿಸಲು ಅವಕಾಶ ನೀಡಲಾಗಿದೆ. ಅದರಂತೆ ಉತ್ತರಕನ್ನಡ ಜಿಲ್ಲೆಗೂ ಈ ಮಾರ್ಗಸೂಚಿಯನ್ನು ಅನ್ವಯಿಸುವಂತೆ ಮನವಿ ಮಾಡಲಾಗಿದೆ' ಎಂದು ಹೇಳಿದರು.`ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಮಾನವ ಅಭಿವೃದ್ಧಿ ವರದಿಯನ್ನು ಸಿದ್ಧಪಡಿಸುವ ಕಾರ್ಯವನ್ನು ಧಾರವಾಡದ ಸಿಎಂಡಿಆರ್ ಸಂಸ್ಥೆಗೆ ವಹಿಸಲಾಗಿದೆ. ವರದಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದ್ದು, ಕರಡು ವರದಿ ಬಹುತೇಕ ಸಿದ್ಧವಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಶಿಶು ಮರಣ ತಡೆ ಪ್ರಮಾಣ ಇತ್ಯಾದಿ ಕ್ಷೇತ್ರಗಳಲ್ಲಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಆಗಿರುವ ಪ್ರಗತಿ, ಇರುವ ಸ್ಥಾನ ಸೇರಿದಂತೆ ಸಮಗ್ರ ಮಾಹಿತಿಗಳು ವರದಿಯಲ್ಲಿ ಪ್ರಕಟವಾಗಲಿವೆ. 2011ರ ಜನಸಂಖ್ಯೆ ಆಧಾರದಲ್ಲಿ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ' ಎಂದರು.`ಜಗಲ್‌ಪೇಟೆ, ನಾಗೋಡ, ರಾಮನಗರ ವ್ಯಾಪ್ತಿಯಲ್ಲಿ ಹೈನುಗಾರಿಕೆ ವಿಸ್ತರಣೆ ಅವಕಾಶಗಳಿದ್ದು, ಈ ಪ್ರದೇಶಗಳಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ವಿಶೇಷ ಗಮನವನ್ನು ಹರಿಸಬೇಕು. ಈ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು' ಎಂದು ಹೇಳಿದರು.ಮಳೆಯಿಂದಾಗಿ ಗ್ರಾಮೀಣ ರಸ್ತೆಗಳು ಸಂಪೂರ್ಣ ಹಾನಿಗೀಡಾಗಿದ್ದು, ರಸ್ತೆ ದುರಸ್ತಿಗಾಗಿ ಪ್ರತಿ ತಾಲ್ಲೂಕಿಗೆ ತಲಾ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು. ಮತ್ತು ಜಿಲ್ಲಾ ಪಂಚಾಯಿತಿ ರಸ್ತೆಗಳ ಅಭಿವೃದ್ಧಿಗೆ ಈಗ ನೀಡುತ್ತಿರುವ ಅನುದಾನ ಬಹಳ ಕಡಿಮೆಯಾಗಿದ್ದು, ಹೆಚ್ಚಿಸುವಂತೆ ಸರ್ಕಾರವನ್ನು ಕೋರಲು ನಿರ್ಧರಿಸಲಾಯಿತು. ಜಿ.ಪಂ. ಅಧ್ಯಕ್ಷ ಕೃಷ್ಣ ಗೌಡ, ಮುಖ್ಯ ಲೆಕ್ಕಾಧಿಕಾರಿ ಟಿ. ಆಂಜನೇಯ, ಸಮಿತಿಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.