ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ

ಚನ್ನಪಟ್ಟಣ: ಗ್ರಾಮಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ತಾಲ್ಲೂಕಿನ ಸಂತೆಮೊಗೇನಹಳ್ಳಿ ದೊಡ್ಡಿಯ ಗ್ರಾಮಸ್ಥರು ಬುಧವಾರ ಕೂಡ್ಲೂರು ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದ ಒಂದು ತಿಂಗಳಿನಿಂದ ನಮ್ಮ ಗ್ರಾಮಕ್ಕೆ ಕುಡಿಯುವ ನೀರಿನ ತೊಂದರೆ ಕಾಡುತ್ತಿದೆ. ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಪಂಚಾಯ್ತಿಯಲ್ಲಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಜನಪ್ರತಿನಿಧಿಗಳಾಗಲಿ, ತಾಲ್ಲೂಕು ಆಡಳಿತವಾಗಲಿ, ಗ್ರಾಮ ಪಂಚಾಯ್ತಿ ಅಧಿಕಾರಿಗಳಾಗಲಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿಲ್ಲ. ಶಾಲೆ ಹಾಗೂ ಅಂಗನವಾಡಿಗಳಲ್ಲಿ ಮಕ್ಕಳಿಗೆ ಬಿಸಿಯೂಟ ಮಾಡಲು ಸಹಾ ನೀರಿನ ಕೊರತೆ ಇದೆ. ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಗ್ರಾಮದಲ್ಲಿ ದಿನಂಪ್ರತಿ ಎರಡು ಬಿಂದಿಗೆ ನೀರೂ ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಅಲವತ್ತುಕೊಂಡರು.
ಅಧಿಕಾರಿಗಳು ಸಮಸ್ಯೆಯನ್ನು ಕಂಡೂ ಕಾಣದಂತಿದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿಷಯ ತಿಳಿದು ಸ್ಥಳಕ್ಕೆ ಬಂದ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ರವಿಕಾಂತ್, ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಸಮಸ್ಯೆ ಪರಿಹರಿಸಲು ಸಾಧ್ಯವಾಗಿಲ್ಲ ಎಂದು ದೂರಿದರು.
ಶೀಘ್ರವೇ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರವಿಕಾಂತ್ ಅವರು ಭರವಸೆ ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.