ಶುಕ್ರವಾರ, ಮೇ 14, 2021
25 °C

ಚಪ್ಪಲಿ ಎಸೆತ ಪ್ರಕರಣ: ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಬೀದರ್‌ನಲ್ಲಿ ನಡೆದ ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆಯತ್ತ ಚಪ್ಪಲಿ ಎಸೆದ ಪ್ರಕರಣವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶಾಸಕ ಈಶ್ವರ ಖಂಡ್ರೆ ತೀವ್ರವಾಗಿ ಖಂಡಿಸಿದ್ದಾರೆ.ಕೆಲವರ ಪ್ರಚೋದನೆಗೆ ಒಳಗಾಗಿ ವೇದಿಕೆಯತ್ತ ಚಪ್ಪಲಿ ಎಸೆಯಲಾಗಿದೆ. ಪ್ರಕರಣದ ಹಿಂದೆ ಯಾರಿದ್ದಾರೆ. ಯಾರ ಕುಮ್ಮಕ್ಕಿನಿಂದ ಈ ರೀತಿ ಮಾಡಲಾಗಿದೆ ಎನ್ನುವ ಕುರಿತು ತನಿಖೆ ನಡೆಸಬೇಕು. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು.ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿ ಸಿ ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ವೇದಿಕೆ ಮೇಲೆ ಆಸೀನರಾಗಿದ್ದರು. ನಂತರ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅವರು ಕೆಳಗೆ ಹೋಗಿ ಕುಳಿತರು. ಇದಾದ ನಂತರ ಕೆಲವರು ಇದಕ್ಕೆಲ್ಲ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರವಿಂದ ಅರಳಿ ಅವರೇ ಕಾರಣರು ಎಂದು ಅವರ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿರುವುದನ್ನು ಖಂಡಿಸಲಾಗುತ್ತದೆ ಎಂದು ಹೇಳಿದರು.ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿಯೇ ಘಟನೆ ನಡೆದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆಪಾದಿಸಿದರು. ಹಲ್ಲೆಯ ಕುರಿತು ಅರಳಿ ಏಪ್ರಿಲ್ 14 ರಂದು ದೂರು ಸಲ್ಲಿಸಿದ್ದಾರೆ. ಆದರೆ, ಏಪ್ರಿಲ್ 16 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಇದರಿಂದ ಪೊಲೀಸರು ತಾರತಮ್ಯ ಮಾಡುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ಕುರಿತು ಐಜಿ ಅವರ ಜೊತೆಗೆ ಚರ್ಚಿಸಿ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.ಬಿಜೆಪಿ ಆಡಳಿತದಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರದ ಉಲ್ಲಂಘನೆ ಆಗುತ್ತಿದೆ. ಶಾಸಕರಲ್ಲದವರು ಸರ್ಕಾರಿ ಕಾರ್ಯಕ್ರಮಗಳಿಗೆ ಚಾಲನೆ ಕೊಡುತ್ತಿದ್ದಾರೆ. ಈ ಕುರಿತು ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಧ್ವನಿ ಎತ್ತಲಾಗುವುದು. ಹಕ್ಕು ಚ್ಯುತಿ ಮಂಡಿಸಲಾಗುವುದು ಎಂದು ಹೇಳಿದರು.ಜಿಲ್ಲೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.