ಶುಕ್ರವಾರ, ಏಪ್ರಿಲ್ 23, 2021
22 °C

ಚಿತ್ರದುರ್ಗ ಬಂದ್ ಯಶಸ್ವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಗುರುವಾರ ಕರೆ ನೀಡಲಾಗಿದ್ದ `ಚಿತ್ರದುರ್ಗ ಬಂದ್~ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಮಾದಿಗ ಮೀಸಲಾತಿ ಹೋರಾಟ ಸಮಿತಿ ಈ ಬಂದ್‌ಗೆ ಕರೆ ನೀಡಿತ್ತು. ಆಯೋಗದ ವರದಿಯಂತೆ ಒಳ ಮೀಸಲಾತಿ ಹಂಚಿಕೆ ಸೂತ್ರದ ಶಿಫಾರಸುಗಳನ್ನು ತಕ್ಷಣ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.ವಾಣಿಜ್ಯ ವಹಿವಾಟು ಸ್ಥಗಿತಗೊಂಡಿತ್ತು. ನಗರದಲ್ಲಿ ಬೆಳಗಿನ ಜಾವದಿಂದಲೇ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4ರ ಮೂಲಕ ಬಸ್‌ಗಳು ಸಂಚರಿಸಿದವು. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಯಿತು. ನಗರದಲ್ಲಿ ಆಟೋರಿಕ್ಷಾ ಸಂಚಾರ ವಿರಳವಾಗಿತ್ತು. ಚಿತ್ರಮಂದಿರಗಳು, ಬ್ಯಾಂಕ್‌ಗಳು, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಕೆಲವು ಅಂಗಡಿಗಳನ್ನು ಒತ್ತಾಯಪೂರ್ವಕವಾಗಿ ಬೆಳಿಗ್ಗೆಯೇ ಮುಚ್ಚಿಸಲಾಯಿತು.ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ತಾಲ್ಲೂಕು ಕಚೇರಿ, ಪ್ರಾದೇಶಿಕ ಸಾರಿಗೆ ಕಚೇರಿ ಸೇರಿದಂತೆ ಸರ್ಕಾರಿ ಕಚೇರಿಗಳು ಬಾಗಿಲು ತೆರೆದಿದ್ದರೂ ಸಾರ್ವಜನಿಕರ ಹಾಜರಾತಿ ಅತಿ ಕಡಿಮೆ ಸಂಖ್ಯೆಯಲ್ಲಿತ್ತು. ನಗರಸಭೆ ಕಚೇರಿಯನ್ನು ಕಾರ್ಯಕರ್ತರು ಮುಚ್ಚಿಸಿದರು. ಬಾಗಿಲು ತೆರೆದಿದ್ದ ಕಾರ್ಪೋರೇಷನ್‌ಬ್ಯಾಂಕ್‌ಗೂ ಕಾರ್ಯಕರ್ತರು ನುಗ್ಗಿ ಮುಚ್ಚಿಸಿದರು.ಗಾಂಧಿ ವೃತ್ತದಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಕಾರ್ಯಕರ್ತರು ಧರಣಿ ನಡೆಸಿ ಘೋಷಣೆಗಳನ್ನು ಹಾಕಿ, ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. |ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ. ಬಂದ್ ಅಂಗವಾಗಿ ಕಾರ್ಯಕರ್ತರು ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.