ಸೋಮವಾರ, ಮೇ 10, 2021
26 °C

ಜನತಾ ನ್ಯಾಯಾಲಯ ಸಂಧಾನಕ್ಕೆ ಸಹಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಾರಿಗೆ, ಸಾಗಾಣಿಕೆ, ಅಂಚೆ, ದೂರವಾಣಿ, ವಿದ್ಯುತ್, ನೀರು ಸರಬರಾಜು, ಕನ್ಸರ್‌ವೆನ್ಸಿ, ಆಸ್ಪತ್ರೆ ಮತ್ತು ವಿಮಾ ಕ್ಷೇತ್ರ ಸೇರಿದಂತೆ ಸಾರ್ವಜನಿಕ ಉಪಯುಕ್ತತಾ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಕಾಯಂ ಜನತಾ ನ್ಯಾಯಾಲಯ ಸಹಕಾರಿಯಾಗಿದೆ ಎಂದು ಕಾಯಂ ಜನತಾ ನ್ಯಾಯಾಲಯದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಹೇಳಿದರು.ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವಾ  ಪ್ರಾಧಿಕಾರ, ವಕೀಲರ ಸಂಘ ಮತ್ತು ಸ್ಥಳೀಯ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕ ಉಪಯುಕ್ತತಾ ಸೇವೆಗಳಿಗೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕಾಯಂ ಜನತಾ ನ್ಯಾಯಾಲಯದ ಅನುಷ್ಠಾನದಿಂದಾಗಿ ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದಂತೆ ತೀವ್ರತರವಲ್ಲದ ಸಾಮಾನ್ಯ ಪ್ರಕರಣಗಳನ್ನು ನ್ಯಾಯಾಲಯದ ಮೆಟ್ಟಿಲೇರುವ ಮೊದಲೇ ಇತ್ಯರ್ಥ ಪಡಿಸಲಾಗುವುದು. ಕಕ್ಷಿದಾರರ ಸಮಕ್ಷಮದಲ್ಲಿ ಕುಳಿತು ಸಾಮಾನ್ಯ ರೀತಿಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆಗಳು ಮುಕ್ತಾಯಗೊಳ್ಳಲಿವೆ. ಅಲ್ಲದೇ ಕಕ್ಷಿದಾರನಿಗೆ ಯಾವುದೇ ರೀತಿಯ ಹಣಕಾಸಿನ ಹೊರೆಯಾಗುವುದಿಲ್ಲ ಎಂದರು.ಎಲ್ಲರಿಗೂ ತ್ವರಿತಗತಿಯಲ್ಲಿ ನ್ಯಾಯ ದೊರಕಬೇಕು ಹಾಗೂ ನ್ಯಾಯದಾನದ ಬಗ್ಗೆ ಅರಿವು ಮತ್ತು ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಜನತಾ ನ್ಯಾಯಾಲಯ ಮಹತ್ವ ಪಡೆದುಕೊಂಡಿದೆ ಎಂದ ಅವರು, ಖಾಯಂ ಜನತಾ ನ್ಯಾಯಾಲಯದಲ್ಲಿ ಸಾರ್ವಜನಿಕ ಕ್ಷೇತ್ರದ ಪ್ರತಿನಿಧಿಗಳು, ವಕೀಲರು ಹಾಗೂ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯಲ್ಲಿ ಪ್ರಕರಣಗಳನ್ನು ಚರ್ಚಿಸಿ, ನಿರ್ಣಯ ಕೈಗೊಳ್ಳಲಾಗುವುದು ಎಂದರು. ಸಭೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಎಸ್. ಮಹಾಲಕ್ಷ್ಮೀ ನೇರಳೆ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಉಪಾಧ್ಯಕ್ಷೆ  ರಮಾ ಎಚ್. ಗುಬ್ಬಿ, ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ರಂಗನಾಥ ಹೆಗಡೆ, ದೇವೇಂದ್ರ ಪೂಜಾರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ ಬಿ.ಎಸ್. ರೇಖಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಕೀಲರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.