ಶುಕ್ರವಾರ, ಮೇ 14, 2021
31 °C

ಜಮೀನು ವಿವಾದ: ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉದ್ಯಮಿಯೊಬ್ಬರಿಗೆ ಮಂಜೂರಾದ ಜಮೀನನ್ನು ನಕಲಿ ದಾಖಲೆಗಳನ್ನು ಬಳಸಿ ರದ್ದುಪಡಿಸಿದ ಆರೋಪ ಎದುರಿಸುತ್ತಿರುವ ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಉದ್ಯಮಿ ಆಲಂ ಪಾಷಾ ಅವರಿಗೆ ಮಂಜೂರಾಗಿದ್ದ ಜಮೀನನ್ನು ಯಡಿಯೂರಪ್ಪ ಮತ್ತು ಮಾಜಿ ಸಚಿವ ಮುರುಗೇಶ ನಿರಾಣಿ ಅವರು ನಕಲಿ ದಾಖಲೆ ಬಳಸಿ ರದ್ದು ಮಾಡಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ, ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು. ಯಡಿಯೂರಪ್ಪ ಅವರು ಒಂದು ಲಕ್ಷ ರೂಪಾಯಿ ಮೌಲ್ಯದ ಬಾಂಡ್ ನೀಡಬೇಕು, ಒಬ್ಬರ ಖಾತ್ರಿ ನೀಡಬೇಕು ಹಾಗೂ ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.ನೋಟಿಸ್: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದ ಮೊಯ್ನಾ ಎಂಬುವರನ್ನು ಇನ್ನೂ ವಾಪಸ್ ಕಳುಹಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಡಿ.ಜೆ. ಹಳ್ಳಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿಗೆ ಆದೇಶ ನೀಡಿದೆ.ಮೊಯ್ನಾ ಅವರನ್ನು 2011ರ ಜನವರಿ 9ರಂದು ಬಂಧಿಸಲಾಗಿತ್ತು. ಅಕ್ರಮವಾಗಿ ದೇಶದೊಳಕ್ಕೆ ನುಸುಳಿದ ಅವರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅದೇ ವರ್ಷದ ಏಪ್ರಿಲ್‌ನಲ್ಲಿ 107 ದಿನಗಳ ಜೈಲು ಶಿಕ್ಷೆ ವಿಧಿಸಿತು. ಜೈಲಿನಿಂದ ಹೊರಬಂದ ನಂತರ ಅವರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿತ್ತು. ಈಗ ಮೊಯ್ನಾ ಅವರು ತಮ್ಮನ್ನು ಸ್ವದೇಶಕ್ಕೆ ವಾಪಸ್ ಕಳುಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಎಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.