ಗುರುವಾರ , ಮೇ 19, 2022
21 °C

ಜಿಲ್ಲಾ ಮಟ್ಟದಲ್ಲೂ ಸಮನ್ವಯ ಸಮಿತಿ: ಪರಮೇಶ್ವರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಪ್ರದೇಶ ಕಾಂಗ್ರೆಸ್ ನಡುವಣ ಸಮನ್ವಯ ಸಾಧಿಸಲು ಉನ್ನತ ಮಟ್ಟದ ಸಮಿತಿ ರಚಿಸುವಂತೆ ಪಕ್ಷದ ಹೈಕಮಾಂಡ್‌ನಿಂದ ಸೂಚನೆ ಬಂದಿದೆ. ಜಿಲ್ಲಾ ಮಟ್ಟದಲ್ಲೂ ಸಮನ್ವಯ ಸಮಿತಿ ರಚನೆಗೆವರಿಷ್ಠರು ಸೂಚಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದರು.ಗುರುವಾರ ಅವರು ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಪದಾಧಿಕಾರಿಗಳು, 28 ಲೋಕಸಭಾ ಕ್ಷೇತ್ರಗಳ ಚುನಾವಣಾ ವೀಕ್ಷಕರು ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ  ಅಧ್ಯಕ್ಷರ ಸಭೆ ನಡೆಸಿ ಲೋಕಸಭಾ ಚುನಾವಣಾ ತಯಾರಿ ಕುರಿತು ಚರ್ಚಿಸಿದರು. ಬಳಿಕ ಪತ್ರಕರ್ತರ ಜೊತೆ ಮಾತನಾಡಿ, `ಸಮನ್ವಯ ಸಮಿತಿಯ ಅಧ್ಯಕ್ಷರು ಯಾರು? ಮತ್ತು ಎಷ್ಟು ಸದಸ್ಯರು ಇರುತ್ತಾರೆ ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ' ಎಂದರು.ರಾಜ್ಯ ಮಟ್ಟದಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶಾಸಕರನ್ನು ಒಳಗೊಂಡ ಸಮಿತಿಗಳನ್ನು ಶೀಘ್ರದಲ್ಲಿ ರಚಿಸಲಾಗುವುದು. ಇವು ಜಿಲ್ಲಾ ಮಟ್ಟದಲ್ಲಿ ಸರ್ಕಾರ ಮತ್ತು ಪಕ್ಷದ ನಡುವಿನ ಸಮನ್ವಯ ಕಾಯ್ದುಕೊಳ್ಳುವ ದಿಕ್ಕಿನಲ್ಲಿ ಕೆಲಸ ಮಾಡುತ್ತವೆ ಎಂದರು.ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಅಭ್ಯರ್ಥಿಗಳ ಜೊತೆಗೂ ಪರಮೇಶ್ವರ್ ಸಮಾಲೋಚಿಸಿದರು.ಗೌಪ್ಯ ವರದಿಗೆ ಸೂಚನೆ: ಲೋಕಸಭಾ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳ ಕುರಿತು ಆಗಸ್ಟ್ 15ರೊಳಗೆ ಗೌಪ್ಯ ವರದಿ ಸಲ್ಲಿಸುವಂತೆ ಕೆಪಿಸಿಸಿಯಿಂದ ನೇಮಕಗೊಂಡಿರುವ ಎಲ್ಲಾ ವೀಕ್ಷಕರಿಗೆ ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ. ಜೊತೆಯಲ್ಲೇ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರವಾರು ಸ್ಥಿತಿಗತಿಗಳ ಬಗ್ಗೆ ವಿಸ್ತೃತವಾದ ವರದಿಯನ್ನೂ ಕೋರಿದ್ದಾರೆ.ಎಲ್ಲಾ ವೀಕ್ಷಕರು ತಮಗೆ ಜವಾಬ್ದಾರಿ ನೀಡಿರುವ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಬೇಕು. ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪ್ರಮುಖರ ಜೊತೆ ಚರ್ಚಿಸಬೇಕು. ಪ್ರತಿ ಕ್ಷೇತ್ರದಲ್ಲೂ ಗೆಲುವು ಸಾಧಿಸುವ ಸಾಧ್ಯತೆ ಇರುವ ಮೂವರ ಹೆಸರನ್ನು ಅಂತಿಮಗೊಳಿಸಿ ಆ.15ರೊಳಗೆ ರಹಸ್ಯವಾಗಿ ವರದಿ ಸಲ್ಲಿಸಬೇಕು ಎಂದು ವೀಕ್ಷಕರಿಗೆ ಸೂಚಿಸಲಾಗಿದೆ.ಆಯಾ ಕ್ಷೇತ್ರಗಳಲ್ಲಿ ಸ್ಥಳೀಯವಾಗಿ ಯಾವ ವಿಷಯ ಚುನಾವಣೆ ಮೇಲೆ ಹೆಚ್ಚು ಪರಿಣಾಮ ಬೀರಬಹುದು ಮತ್ತು ಅದಕ್ಕೆ ಸಂಬಂಧಿಸಿದಂತೆ ಪಕ್ಷ ಯಾವ ನಿಲುವು ತೆಗೆದುಕೊಳ್ಳಬಹುದು ಎಂಬುದನ್ನು ವರದಿಯಲ್ಲಿ ತಿಳಿಸಬೇಕು. ಪ್ರತಿ ಕ್ಷೇತ್ರದಲ್ಲೂ  ಕಾಂಗ್ರೆಸ್‌ಗೆ ತೀವ್ರ ಸ್ಪರ್ಧೆ ನೀಡಬಹುದಾದ ಪಕ್ಷ, ವ್ಯಕ್ತಿಗಳು ಹಾಗೂ ಕಾಂಗ್ರೆಸ್ ಸದ್ಯದ ಪರಿಸ್ಥಿತಿಯ ಆಧಾರದಲ್ಲಿ ಎಷ್ಟನೇ ಸ್ಥಾನ ಪಡೆಯಬಹುದು ಎಂಬ ಮಾಹಿತಿಯನ್ನೂ ವರದಿಯಲ್ಲಿ ನೀಡುವಂತೆ ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.