ಭಾನುವಾರ, ಮೇ 22, 2022
28 °C

`ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆಗೆ ಆದ್ಯತೆ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ:  `ನಗರದಲ್ಲಿ ಕಳವು, ಅಪಘಾತ ಪ್ರಕರಣಗಳ ನಿಯಂತ್ರಣದ ಜೊತೆಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಆದ್ಯತೆ ನೀಡಲಾಗುವುದು' ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈ.ಎಸ್.ರವಿಕುಮಾರ್ ತಿಳಿಸಿದರು.ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಜಿಲ್ಲೆಯ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಆ ಪ್ರಕಾರ, ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ, ಚಿತ್ರದುರ್ಗ ಜಿಲ್ಲೆ ಶಾಂತಿ, ಸೌಹಾರ್ದತೆಯಿಂದ ಕೂಡಿದೆ' ಎಂದು ಹೇಳಿದರು.ಜಿಲ್ಲೆಯಲ್ಲಿ ಹಾದುಹೋಗಿರುವ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದರ ಬಗ್ಗೆ ಮಾಹಿತಿ ಇದೆ. ಇಂಥ ಸಮಸ್ಯೆಗಳಿಗೆ ಏಕಾಏಕಿ ಪರಿಹಾರ ನೀಡುವುದು ಕಷ್ಟ. ಅಪಘಾತವಾಗುತ್ತಿರುವ ಸ್ಥಳಗಳಲ್ಲಿ ಅಂಡರ್‌ಪಾಸ್, ಮೇಲು ಸೇತುವೆಗಳು ನಿರ್ಮಾಣವಾಗಬೇಕು. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಇಲಾಖೆಯವರೊಂದಿಗೆ ಚರ್ಚಿಸಿ ಅಪಘಾತ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ' ಎಂದ ಭರವಸೆ ನೀಡಿದರು.`ಜಿಲ್ಲೆಯ ಹಿರಿಯೂರು, ಮೊಳಕಾಲ್ಮುರು, ಚಳ್ಳಕೆರೆ ತಾಲ್ಲೂಕುಗಳಲ್ಲಿ ಪೊಲೀಸರೇ ಅಕ್ರಮ ಮರಳು ಗಣಿಗಾರಿಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆಂಬ ಆರೋಪಗಳಿವೆ' ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, `ಈ ವಿಚಾರ ತಮಗೆ ತಿಳಿದಿಲ್ಲ. ಒಂದು ವೇಳೆ ಪೊಲೀಸ್ ಇಲಾಖೆ ಅಕ್ರಮ ಮರಳು ಗಣಿಗಾರಿಕೆಗೆ ಸಹಕಾರ ನೀಡಿದ್ದು ಗಮನಕ್ಕೆ ಬಂದರೆ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ಈ ವಿಚಾರವಾಗಿ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಅಕ್ರಮ ಮರಳು ತಡೆಗೆ ಪೊಲೀಸ್ ಇಲಾಖೆಯಿಂದ ಬೇಕಾದ ಎಲ್ಲ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.ಹೆದ್ದಾರಿ ಬದಿಯಲ್ಲಿರುವ ಡಾಬಾಗಳ ಎದುರು ಪಾರ್ಕಿಂಗ್ ದಟ್ಟಣೆಯಾಗುತ್ತಿರುವ ಕುರಿತು ಮಾತನಾಡಿದ ರವಿಕುಮಾರ್ ಅವರು, `ಹೆದ್ದಾರಿ ಗಸ್ತು ತಿರುಗುವ ಪೊಲೀಸ್ ಅಧಿಕಾರಿಗಳಿಗೆ ಪಾರ್ಕಿಂಗ್ ತೆರವುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ' ತಿಳಿಸಿದರು.ನಗರದ ಪ್ರಮುಖ ರಸ್ತೆಬದಿಯಲ್ಲಿ ಪಾರ್ಕಿಂಗ್ ದಟ್ಟಣೆ, ಮುಖ್ಯ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ಅಸಮರ್ಪಕ ಕಾರ್ಯ ವೈಖರಿ ಹಾಗೂ ಪಾದಚಾರಿ ಮಾರ್ಗಕ್ಕೆ ಸ್ಥಳಾವಕಾಶ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ಈ ವಿಚಾರಕ್ಕೆ ಸಂಬಂಧಿಸಿದಂತೆ ನಗರಸಭೆ, ಜಿಲ್ಲಾಡಳಿತ ಹಾಗೂ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆ ಪರಿಹರಿಸಲಾಗುವುದು' ಎಂದು ಹೇಳಿದರು.ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ, ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ  ಮಾಹಿತಿ ನೀಡಲು ಅವರು ಕೋರಿದರು. ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವವರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.ರಾತ್ರಿ ಪಾಳಿಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ನಾಗರಿಕರ ಸಹಯೋಗ ದೊಂದಿಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಕಾರ್ಯಸೂಚಿ ರೂಪಿಸಲಾಗುವುದು. ಪೊಲೀಸ್ ಇಲಾಖೆಯ ಕಾರ್ಯಗಳಿಗೆ ನಾಗಕರಿಕರು ಹಾಗೂ ಮಾಧ್ಯಮದವರು ಸಹಕಾರ ನೀಡಬೇಕೆಂದು' ರವಿಕುಮಾರ್ ಮನವಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.