ಜೆಸ್ಕಾಂ ಕಚೇರಿ ಮುತ್ತಿಗೆ ಯತ್ನ

7

ಜೆಸ್ಕಾಂ ಕಚೇರಿ ಮುತ್ತಿಗೆ ಯತ್ನ

Published:
Updated:

ಕೊಪ್ಪಳ: ಅಸಮರ್ಪಕ ವಿದ್ಯುತ್ ಪೂರೈಕೆಯನ್ನು ಖಂಡಿಸಿ ಕೊಪ್ಪಳ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.ನಗರದ ಅಶೋಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಮುಂಡರಗಿ ಭೀಮರಾಯ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ನಂತರ ಮೆರವಣಿಗೆ ಮೂಲಕ ಜೆಸ್ಕಾಂ ಕಚೇರಿಗೆ ಆಗಮಿಸಿದ ಪ್ರತಿಭಟನಾಕರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರಲ್ಲದೇ, ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.ಒಂದು ಹಂತದಲ್ಲಿ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ತಡೆದರಲ್ಲದೇ, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಒಪ್ಪದಿದ್ದಾಗ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.ಇದಕ್ಕೂ ಮುನ್ನ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ್, ಮೊದಲೇ ಬರದಿಂದ ತತ್ತರಿಸಿರುವ ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆ ಇಲ್ಲದೇ ಜನರು ಕಂಗಾಲಾಗಿದ್ದಾರೆ ಎಂದು ಟೀಕಿಸಿದರು.ಕೊಪ್ಪಳ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಬಸವನಗೌಡ ಬಾದರ್ಲಿ ಮಾತನಾಡಿ, ನೀರಿಲ್ಲದೆ ಬೆಳೆದ ಬೆಳೆಗಳು ನಾಶವಾಗುವ ಸ್ಥಿತಿ ನಿರ್ಮಾಣಗೊಂಡಿದ್ದು ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ ರೈತರಿಗೆ ನೆರವಾಗಬೇಕು ಎಂದು ಆಗ್ರಹಿಸಿದರು.ಸಚಿವರು ಮೋಜು -ಮಸ್ತಿ ಹಾಗೂ ಅಧಿಕಾರದ ದಾಹಕ್ಕಾಗಿ ಹಾತೊರೆಯುತ್ತಿದ್ದು, ರೈತರ ಸಂಕಟ ಕೇಳುವವರೇ ಇಲ್ಲದಂತಾಗಿದೆ ಎಂದೂ ಟೀಕಿಸಿದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ್, ಎಸ್.ಬಿ. ನಾಗರಳ್ಳಿ, ವಿಧಾನ ಪರಿಷತ್‌ನ ಮಾಜಿ  ಸದಸ್ಯ ಕರಿಯಣ್ಣ ಸಂಗಟಿ, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷಾ, ಉಪಾಧ್ಯಕ್ಷ ಸುರೇಶ ದಾಸರೆಡ್ಡಿ, ನಗಸಭೆ ಸದಸ್ಯ ಜಾಕೀರ್ ಹುಸೇನ್ ಕಿಲ್ಲೇದಾರ, ಮಹಿಳಾ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷೆ ಇಂದಿರಾ ಭಾವಿಕಟ್ಟಿ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry