ಮಂಗಳವಾರ, ಮೇ 17, 2022
26 °C

`ಜೈವಿಕ ಇಂಧನ ಅನುಷ್ಠಾನಕ್ಕೆ ಕ್ರಿಯಾಯೋಜನೆ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರ್ಕಳ: ಜೈವಿಕ ಇಂಧನ ಬಳಕೆಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಪ್ರಮುಖವಾದುದು ಎಂದು ಉಡುಪಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಭಾಕರ ಶರ್ಮ ಹೇಳಿದ್ದಾರೆ.ತಾಲ್ಲೂಕಿನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಸಭಾಭವನದಲ್ಲಿ ಸೋಮವಾರ ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಚುನಾಯಿತ ಸದಸ್ಯರಿಗೆ ಜೈವಿಕ ಇಂಧನ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಜೈವಿಕ ಇಂಧನ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಒಂದು ಕೋಟಿ ರೂಪಾಯಿಗಳ ಕ್ರಿಯಾಯೋಜನೆ ತಯಾರಿಸಲಾಗಿದ್ದು, ಅದಕ್ಕೆ ಸರ್ಕಾರದ ಅನುಮೋದನೆ ಕೂಡ ದೊರಕಿರುತ್ತದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೊಳಿಸುವಲ್ಲಿ ಗ್ರಾಮ ಪಂಚಾಯಿತಿಗಳು ಮುತುವರ್ಜಿ ವಹಿಸಬೇಕು. ಆಗ ಅನುದಾನವನ್ನು ಸದ್ವಿನಿಯೋಗಗೊಳಿಸಲು ಸಾಧ್ಯ ಎಂದರು.ತರಬೇತಿ ಕಾರ್ಯಕ್ರಮದ ನಿರ್ದೇಶಕ ವಲಯ ಅರಣ್ಯ ಉಪಸಂರಕ್ಷಣಾಧಿಕಾರಿ ಮಹಮದ್ ಅಕ್ಬರ್ ಮಾತನಾಡಿ, ಅರಣ್ಯ ಇಲಾಖೆಯ ನರ್ಸರಿಗಳಲ್ಲಿ ಜೈವಿಕ ಇಂಧನ ಸಸಿಗಳನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಸಲಾಗಿದೆ. ಅವುಗಳನ್ನು ಅತಿ ಕಡಿಮೆ ದರದಲ್ಲಿ ರೈತರಿಗೆ ನೀಡುವ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ ಎಂದರು.ಸಮಗ್ರ ಗ್ರಾಮೀಣ ಇಂಧನ ಕಾರ್ಯಕ್ರಮದ ಕಾರ್ಯನಿರ್ವಾಹಕ ಎಂಜಿನಿಯರ್ ದತ್ತಾತ್ರೇಯ ಮಾತನಾಡಿ, ಮುಂದಿನ ದಿನಗಳಲ್ಲಿ ಜೈವಿಕ ಇಂಧನ ಕೃಷಿ ಆದಾಯಕರವಾಗಲಿದೆ ಎಂದರು.ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಪ್ರಾಂಶುಪಾಲ ನಿರಂಜನ್ ಚಿಪ್ಳೂಣ್ಕರ್ ಮಾತನಾಡಿ, ಜೈವಿಕ ಇಂಧನ ಕಾರ್ಯಕ್ರಮದ ಅನುಷ್ಠಾನದಲ್ಲಿ ಖಾಸಗಿ ಸಂಸ್ಥೆಗಳ ಸಹಭಾಗಿತ್ವ ಅನಿವಾರ್ಯವಾಗಿದ್ದು ಇದರಲ್ಲಿ ನಿಟ್ಟೆ ವಿದ್ಯಾ ಸಂಸ್ಥೆ ಪೂರ್ಣ ಸಹಕಾರ ನೀಡಲಿದೆ ಎಂದರು.ಜೈವಿಕ ಇಂಧನ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರದ ಆಯೋಜಕ ವಾಮನ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟೇಶ ಕಾಮತ್ ಸ್ವಾಗತಿಸಿದರು. ಅಶೋಕ್ ವಂದಿಸಿದರು. ಸಂತೋಷ್ ಪೂಜಾರಿ  ನಿರೂಪಿಸಿದರು. ಮೊದಲನೇ ತಂಡದ ತರಬೇತಿಯನ್ನು ವೆಂಕಟೇಶ ಕಾಮತ್ ನಡೆಸಿಕೊಟ್ಟರು. ಇದೇ 19ರವರೆಗೆ ತರಬೇತಿ ಕಾರ್ಯಕ್ರಮ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.