ಸೋಮವಾರ, ಏಪ್ರಿಲ್ 19, 2021
32 °C

ತಂದೆಯ ಮಾತು ಲೆಕ್ಕಿಸದೆ ಕಣಕ್ಕೆ ಕುಮಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಫರ್ಧಿಸುವುದಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೋಮವಾರ ರಾತ್ರಿ ಅಧಿಕೃತವಾಗಿ ಘೋಷಿಸಿದರು. ಬುಧವಾರ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಪಕ್ಷದ ಕಚೇರಿಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿದ ಅವರು, ಚುನಾವಣೆಗೆ ಬೇರೆಯವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಮನವೊಲಿಸಲು ಪ್ರಯತ್ನಿಸಿದರು. ತಾವು ಕಣಕ್ಕೆ ಇಳಿಯುವುದಿಲ್ಲ ಎಂದು ಒಮ್ಮೆ ಪ್ರಕಟಿಸಿದರು. ಆದರೆ ಕಾರ್ಯಕರ್ತರ ಅಸಮಾಧಾನ ಹೆಚ್ಚಿದ ಹಿನ್ನೆಲೆಯಲ್ಲಿ ಮತ್ತೆ ಮನಸ್ಸು ಬದಲಿಸಿ, ತಾವೇ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದರು.ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಗತ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸೋಮವಾರ ಬೆಳಿಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಪರ್ಧೆಯಿಂದ ದೂರ ಉಳಿಯುವ ಬಗ್ಗೆ ಕುಮಾರಸ್ವಾಮಿ ಚಿಂತಿಸಿದ್ದರು. ಸಂಜೆ ಪಕ್ಷದ ಕಚೇರಿಯಲ್ಲಿ ಸುದೀರ್ಘ ಕಾಲ ಕಾರ್ಯಕರ್ತರ ಸಭೆ ನಡೆಸಿದ ಅವರು, ಅಭಿಪ್ರಾಯ ಸಂಗ್ರಹಿಸಿದರು. ಬಹುತೇಕ ಮುಖಂಡರು ಮತ್ತು ಕಾರ್ಯಕರ್ತರು ಕುಮಾರಸ್ವಾಮಿ ಅವರೇ ಚುನಾವಣಾ ಕಣಕ್ಕಿಳಿಯಬೇಕೆಂದು ಪಟ್ಟು ಹಿಡಿದರು.ಬೇರೊಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವ ಮತ್ತು ಚುನಾವಣೆ ಬಹಿಷ್ಕರಿಸುವ ಬೆದರಿಕೆಗಳೂ ಕಾರ್ಯಕರ್ತರಿಂದ ತೂರಿಬಂದವು. ಕಾರ್ಯಕರ್ತರ ಒತ್ತಡಕ್ಕೆ ಮಣಿದು ತಾವೇ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಪ್ರಕಟಿಸಿದರು. ಬುಧವಾರ ನಾಮಪತ್ರ: ಸಭೆಯ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಕುಮಾರಸ್ವಾಮಿ, ‘ಬೇರೊಬ್ಬರನ್ನೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಕಾರ್ಯಕರ್ತರ ಮನವೊಲಿಕೆಗೆ ಪ್ರಯತ್ನಿಸಿದೆ. ಆದರೆ ನಾನೇ ಅಭ್ಯರ್ಥಿ ಆಗಬೇಕೆಂದು ಹಲವರು ಹಠ ಹಿಡಿದರು.

 

ಬೇರೊಬ್ಬರು ಪಕ್ಷದಿಂದ ಸ್ಪರ್ಧಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮತ್ತು ಚುನಾವಣೆ ಬಹಿಷ್ಕರಿಸುವುದಾಗಿ ಕೆಲವು ಕಾರ್ಯಕರ್ತರು ಬೆದರಿಕೆ ಒಡ್ಡಿದರು. ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ನಾನೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ’ ಎಂದರು. ‘ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ. ಕಾರ್ಯಕರ್ತರಿಗಾಗಿ ಎಲ್ಲವನ್ನೂ ತ್ಯಾಗ ಮಾಡಲು ಸಿದ್ಧನಿದ್ದೇನೆ. ಅವರ ಭಾವನೆಯನ್ನು ಗೌರವಿಸಿ ಬುಧವಾರ ನಾಮಪತ್ರ ಸಲ್ಲಿಸುತ್ತಿದ್ದೇನೆ’ ಎಂದು ಹೇಳಿದರು.ಸಂಸದ ಎನ್.ಚೆಲುವರಾಯಸ್ವಾಮಿ, ಶಾಸಕರಾದ ಜಮೀರ್ ಅಹಮ್ಮದ್ ಖಾನ್, ಎಚ್.ಸಿ.ಬಾಲಕೃಷ್ಣ, ಪುಟ್ಟಣ್ಣ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. ಬಂಗಾರಪೇಟೆಗೆ ವೆಂಕಟೇಶಪ್ಪ: ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ವೆಂಕಟೇಶಪ್ಪ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಅವರು ಕೂಡ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಪ್ರಕಟಿಸಿದ್ದಾರೆ. ಜಗಳೂರು ಕ್ಷೇತ್ರಕ್ಕೆ ಈವರೆಗೂ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ. ಮೂರು ಕ್ಷೇತ್ರಗಳಲ್ಲೂ ಸ್ಪರ್ಧಿಸಲು ನಿರ್ಧರಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.