ಭಾನುವಾರ, ಮೇ 22, 2022
24 °C
ರಾಯಚೂರು: ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅನುದಾನ ದುರ್ಬಳಕೆ ಆರೋಪ

ತಪ್ಪಿತಸ್ಥರ ವಿರುದ್ಧ ಕ್ರಮ: ಉಸ್ತುವಾರಿ ಸಚಿವೆ ಉಮಾಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡದೇ ಸರ್ಕಾರದ ಹಣ ಪಡೆದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಹಾಗೂ ಗುಳೆ ಹೋಗಿರುವ ಕುಟುಂಬಗಳ ಸಮೀಕ್ಷೆ ನಡೆಸಿ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ  ಜಿಲ್ಲಾ ಉಸ್ತುವಾರಿ ಸಚಿವೆ  ಉಮಾಶ್ರೀ  ಸೂಚಿಸಿದರು.ಇಲ್ಲಿನ  ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡಬೇಕು ಹಾಗೂ ವೇತನ ಪಾವತಿಸುವ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ. ಅಂತರ್ಜಾಲದ ಮೂಲಕ ಕೂಲಿಕಾರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಸೂಚಿಸಿದರು.ಲಿಂಗಸುಗೂರು ತಾಲ್ಲೂಕಿನ ಹೊನ್ನಳ್ಳಿ ಗ್ರಾಮ ಪಂಚಾಯಿತಿ ಅವ್ಯವಹಾರ ಸಾಬೀತಾಗಿದ್ದು, ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ತೆಗೆದುಕೊಂಡಿದ್ದೀರಿ ಎಂದು ಲಿಂಗಸುಗೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ವೀರಭದ್ರಪ್ಪ ಅವರಿಗೆ  ಪ್ರಶ್ನಿಸಿದರು.ಅನುದಾನ ದುರುಪಯೋಗಕ್ಕೆ ಸಂಬಂಧಿಸಿದಂತೆ ತಮಗೆ ಏನು ತಿಳಿದಿಲ್ಲ. ನಾನು ಇದ್ದಿಲ್ಲ ಎಂಬ ವೀರಭದ್ರಪ್ಪ  ಉತ್ತರಕ್ಕೆ ಸಚಿವೆ ಉಮಾಶ್ರೀ ಆಕ್ರೋಶ ವ್ಯಕ್ತಪಡಿಸಿದರು.ಮಧ್ಯೆ ಪ್ರವೇಶಿಸಿದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಹಮ್ಮದ್ ಯೂಸೂಫ್ ಅವರು ಹೊನ್ನಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅವರು ನಿವೃತ್ತಗೊಂಡಿದ್ದಾರೆ. ದುರ್ಬಳಕೆ ಅನುದಾನವನ್ನು ವಸೂಲಾತಿಗಾಗಿ ಸೂಚನೆ ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು.ಸಚಿವೆ ಉಮಾಶ್ರೀ, ವಸೂಲಾತಿಗೆ ಸೂಚನೆ ನೀಡಿದ್ದೇವೆ. ಹೇಳಿದ್ದೇವೆ ಎಂಬ ಉತ್ತರ  ಬೇಡ. ನೀವು ನೀಡುವ ಸಮರ್ಥನೆಯು ತಪ್ಪಿತ್ಥರ ಅಧಿಕಾರಿಗಳ ರಕ್ಷಣೆ ಉದ್ದೇಶವಾಗಿ ಎಂಬುದು ಕಂಡಬರುತ್ತದೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಸಮರ್ಪಕವಾಗಿ ಕೂಲಿ ಕಾರ್ಮಿಕರಿಗೆ ಕೂಲಿ ನೀಡುತ್ತಿಲ್ಲ. ಗೂಳೆ ಹೋಗಿರುವ ಕುಟುಂಬದ ಸದಸ್ಯರ ಹೆಸರಿನ ಮೇಲೆ  ಕೂಲಿ ಹಣವನ್ನು ಗ್ರಾಮ ಪಂಚಾಯಿತಿ ಸದಸ್ಯರು ಪಡೆಯುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಮಾನಪ್ಪ ವಜ್ಜಲ್ ಆಗ್ರಹಿಸಿದರು.ಉದ್ಯೋಗ ಖಾತರಿ ಹಾಗೂ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗ್ರಾಮಸಭೆಯನ್ನು ನಡೆಸುತ್ತಿಲ್ಲ. ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಲು ಅಧಿಕಾರಿಗಳು ಆದೇಶ ಮಾಡಬೇಕು ಎಂದು ಶಾಸಕ ಪ್ರತಾಪಗೌಡ ತಿಳಿಸಿದರು.ಗ್ರಾಮಸಭೆ ನಡೆಸಬೇಕು ಸರ್ಕಾರ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಮುಂದಿನ ದಿನಗಳಲ್ಲಿ ಯೋಜನೆಗಳ ಅನುಷ್ಠಾನದಲ್ಲಿ  ನಿರ್ಲಕ್ಷ್ಯವಹಿಸುವುದು ಸಲ್ಲದು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗಿದೆ. ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ 86 ಶಿಕ್ಷಕರ ವರ್ಗಾವಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಸ್ ಪರಮೇಶ ಸಭೆಗೆ ತಿಳಿಸಿದರು.ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲಾ ಕಟ್ಟಡ ನಿರ್ಮಾಣ ಪ್ರಗತಿ ಸೇರಿದಂತೆ ಯಾವುದೇ ಮಾಹಿತಿಯನ್ನು ಜನಪ್ರತಿನಿಧಿಗಳಿಗೆ ನೀಡದೇ ಸಂಪೂರ್ಣ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಶಾಸಕರಾದ ಹಂಪನಗೌಡ ಬಾದರ್ಲಿ, ಜಿ.ಹಂಪಯ್ಯ ನಾಯಕ ಆಪಾದಿಸಿದರು.ನಿರ್ಮಿತಿ ಕೇಂದ್ರಕ್ಕೆ ವಹಿಸಿಕೊಟ್ಟ ವಿವಿಧ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಂಡಿದ್ದು, ಈ ಹಿಂದೆ ನಿರ್ಮಿತಿ ಕೇಂದ್ರಕ್ಕೆ ವಹಿಸಿದ ಆಸರೆ,ಆಶ್ರಯ ಸೇರಿದಂತೆ ಅನೇಕ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸಾಬೀತುಗೊಂಡಿದೆ.

ಈ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ವಹಿಸಿಕೊಟ್ಟ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ನಿರ್ಮಿತಿ ಕೇಂದ್ರಕ್ಕೆ ಸಂಬಂಧಿಸಿದ ಎಲ್ಲ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ.ಅರ್ಧಕ್ಕೆ ನಿಂತಿರುವ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಲಾಗಿದೆ ಎಂದು ನಿರ್ಮಿತಿ ಕೇಂದ್ರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಎಸ್.ಎನ್ ನಾಗರಾಜು ಸಚಿವರ ಗಮನಕ್ಕೆ ತಂದರು.ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಟಿ.ಜ್ಞಾನಪ್ರಕಾಶ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲಲಿತಮ್ಮ ಲಿಂಗರಾಜು, ಉಪಾಧ್ಯಕ್ಷ ಕೆ.ಶರಣಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ ಬಿಸ್ನಳ್ಳಿ, ಉಪವಿಭಾಗಾಧಿಕಾರಿ ಎನ್.ಮಂಜುಶ್ರೀ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.