ತ್ಯಾಜ್ಯ ಸಂಸ್ಕರಣಾ ಘಟಕ ಮತ್ತೆ ಆರಂಭಕ್ಕೆ ವಿರೋಧ

7

ತ್ಯಾಜ್ಯ ಸಂಸ್ಕರಣಾ ಘಟಕ ಮತ್ತೆ ಆರಂಭಕ್ಕೆ ವಿರೋಧ

Published:
Updated:

ತಿರುವನಂತಪುರ (ಪಿಟಿಐ): ವಿಲಪ್ಪಿಲ್‌ಶಾಲಾದ  ಜನರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕಳೆದ ವರ್ಷ ಸ್ಥಗಿತಗೊಳಿಸಲಾಗಿದ್ದ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಆಧುನಿಕ ಯಂತ್ರಗಳನ್ನು ಜೋಡಿಸಿ ಪುನರಾರಂಭಿಸುವ ಯತ್ನಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಪಂಚಾಯತಿ ಅಧ್ಯಕ್ಷೆ ಶೋಭನಾ ಕುಮಾರಿ ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಸರ್ಕಾರ ಜನರಿಗೆ ವಂಚಿಸುತ್ತಿದೆ ಎಂದು ಆಪಾದಿಸಿರುವ ಅವರು, ಈ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಶಾಶ್ವತವಾಗಿ ಮುಚ್ಚದಿದ್ದರೆ ಜಂಟಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಘಟಕಕ್ಕೆ ಹೊಸ ಯಂತ್ರಗಳನ್ನು ತಂದಿರುವುದನ್ನು ಪ್ರತಿಭಟಿಸಿ ವಿಲಪ್ಪಿಲ್‌ಶಾಲಾ  ಜನರು ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ತಿರುವನಂತಪುರದಲ್ಲಿ ಕಸ ವಿಲೇವಾರಿ ದೊಡ್ಡ ಸಮಸ್ಯೆಯಾಗಿದೆ. ಇದನ್ನು ಬಗೆಹರಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೇರಳ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಕಳೆದ ವಾರ ಆದೇಶ ನೀಡಿತ್ತು.ಹೈಕೋರ್ಟ್ ಆದೇಶವನ್ನು ಜಾರಿ ಮಾಡಲು ಸರ್ಕಾರ ಮುಂದಾದಾಗ ಪ್ರತಿಭಟನೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಉಮ್ಮನ್ ಚಾಂಡಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry