ದೌರ್ಜನ್ಯ ಎಸಗುವವರಿಗೆ ಕಠಿಣ ಶಿಕ್ಷೆಗೆ ಆಗ್ರಹ

7

ದೌರ್ಜನ್ಯ ಎಸಗುವವರಿಗೆ ಕಠಿಣ ಶಿಕ್ಷೆಗೆ ಆಗ್ರಹ

Published:
Updated:
ದೌರ್ಜನ್ಯ ಎಸಗುವವರಿಗೆ ಕಠಿಣ ಶಿಕ್ಷೆಗೆ ಆಗ್ರಹ

ಬೆಂಗಳೂರು: ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯೊಂದಿಗೆ ವಿವಿಧ ಸಂಘಟನೆಗಳ ಸದಸ್ಯರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.


 

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಯುಸಿಐ ಸಂಘಟನೆಯ ರಾಜ್ಯ ಘಟಕದ ಸದಸ್ಯೆ ಕೆ.ಉಮಾ, `ಜಾಗತೀಕರಣದ ಫಲವಾಗಿ ಮಹಿಳೆಯನ್ನು ಕೇವಲ ಉಪಭೋಗದ ವಸ್ತುವನ್ನಾಗಿ ನೋಡಲಾಗುತ್ತಿದೆ. ಇದರಿಂದ ಸಮಾಜ ಮಹಿಳೆಯರನ್ನು ನೋಡುವ ದೃಷ್ಟಿಕೋನವೇ ಬದಲಾಗುತ್ತಿದೆ. ಹೀಗಾಗಿಯೇ ದೆಹಲಿ ಮತ್ತು ಬೆಂಗಳೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ನಡೆದಿವೆ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು' ಎಂದು ಒತ್ತಾಯಿಸಿದರು.

 

`ಮಹಿಳೆಯರಿಗೆ ಭದ್ರತೆ ನೀಡಲು ಸರ್ಕಾರಗಳು ವಿಫಲವಾಗಿವೆ. ಇದು ಆತಂಕಕಾರಿ ಬೆಳವಣಿಗೆ. ಇಂತಹ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್ ವ್ಯವಸ್ಥೆ ವಿಫಲವಾಗಿದೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆಯರಿಗೆ ಸಾಂತ್ವನ ಅಗತ್ಯ. ಈ ನಿಟ್ಟಿನಲ್ಲಿ ಸರ್ಕಾರ ಅವರ ಜೀವನ ಉತ್ತಮ ಪಡಿಸಲು ಮುಂದಾಗಬೇಕು' ಎಂದು ಅವರು ಆಗ್ರಹಿಸಿದರು.

 

ಅಣಕು ಪ್ರದರ್ಶನ: ದೆಹಲಿ ಮತ್ತು ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣಗಳ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಸದಸ್ಯರು ನಗರದ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಅಣಕು ಪ್ರದರ್ಶನ ನಡೆಸಿದರು. ನಂತರ ಮಾತನಾಡಿದ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, `ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಅತ್ಯಾಚಾರಕ್ಕೆ ಒಳಗಾದ ಹೆಣ್ಣು ಮಕ್ಕಳಿಗೆ ಸರ್ಕಾರ ಅಗತ್ಯ ನೆರವು ನೀಡಬೇಕು' ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry